ಹಾವೇರಿ :ಸಮ್ಮೇಳನಾಧ್ಯಕ್ಷರ ನೇತೃತ್ವದಲ್ಲಿ ಕನ್ನಡನಾಡಿನ ಅಭಿವೃದ್ದಿಗೆ ಸರ್ಕಾರ ಬದ್ಧವಾಗಿದೆ. ಕಳೆದ ಎರಡು ದಿನಗಳಿಂದ ಹಾವೇರಿ ಜಿಲ್ಲೆಯಿಂದ ರಾಜ್ಯದೆಲ್ಲೆಡೆ ಸಾಹಿತ್ಯದ ಕಂಪು ಹರಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ನಡೆಯಲಿದೆ. ಸಮ್ಮೇಳನದ ಯಶಸ್ವಿಗೆ ಶ್ರಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಹಾಗೂ ಜಿಲ್ಲಾಡಳಿತಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅಭಿನಂದನೆ ಸಲ್ಲಿಸಿದರು. ಸಾಹಿತಿಗಳು ನೀಡಿರುವ ಹೇಳಿಕೆಗಳನ್ನು ಸಕಾರಾತ್ಮಕವಾಗಿ ಪರಿಗಣಿಸುವುದಾಗಿ ಇದೇ ವೇಳೆ ತಿಳಿಸಿದರು.
ಚಿತ್ರದುರ್ಗದಲ್ಲಿ ಕಾಂಗ್ರೆಸ್ ಎಸ್ಸಿಎಸ್ಟಿ ಸಮಾವೇಶದ ಬಗ್ಗೆ ಮಾತನಾಡಿದ ಅವರು ಸಿಎಂ ಬೊಮ್ಮಾಯಿ ಅವರು, ನಾವು ಈಗಾಗಲೇ ಚುನಾವಣಾ ಅಖಾಡಕ್ಕೆ ಧುಮುಕಿ ಬಹಳ ದಿನಗಳಾಗಿವೆ. ಈ ಬಗ್ಗೆ ಜನ ತೀರ್ಮಾನ ಮಾಡುತ್ತಾರೆ. ಎಸ್ಸಿ ಎಸ್ಟಿ ಜನಾಂಗಕ್ಕೆ ಯಾರೆಲ್ಲಾ ಯಾವ ಕಾರ್ಯಕ್ರಮ ಕೊಟ್ಟಿದ್ದಾರೆ. ಎಷ್ಟು ಅನುಷ್ಠಾನವಾಗಿದೆ. ಎಸ್ಸಿ ಎಸ್ಟಿ ಜನಾಂಗದವರ ಬದುಕು ಎಷ್ಟು ಉತ್ತಮವಾಗಿದೆ ಎಂಬುದು ಅವರಿಗೆ ಗೊತ್ತಿದೆ ಎಂದು ತಿಳಿಸಿದರು.
ವೋಟ್ ಬ್ಯಾಂಕ್ ರಾಜಕಾರಣ ನಡೆಯುವುದಿಲ್ಲ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ಎಲ್ಲರೂ ಈಗ ಜಾಗೃತರಾಗಿದ್ದಾರೆ. ಜಾಗತೀಕರಣದ ನಂತರ ಅವರ ಸ್ಥಾನ ಆಶೋತ್ತರಗಳು ಹೆಚ್ಚಾಗಿವೆ. ಅದಕ್ಕೆ ತಕ್ಕಂತೆ ಸರ್ಕಾರಗಳು ಸ್ಪಂದಿಸಿವೆ. ವಿರೋಧ ಪಕ್ಷದವರು ಸಹಜವಾಗಿ ತಾವು ಅಧಿಕಾರದಲ್ಲಿದ್ದಾಗ ಏನು ಮಾಡಿದ್ದಾರೆ ಎಂಬುದನ್ನು ಹೇಳುತ್ತಾರೆ. ಇನ್ನು ಮುಂದೆ ವೋಟ್ ಬ್ಯಾಂಕ್ ರಾಜಕಾರಣ ನಡೆಯುವುದಿಲ್ಲ. ಇದು ಈಗಾಗಲೇ ಸಾಬೀತಾಗಿದೆ. ಮುಂಬರುವ ಚುನಾವಣೆಯಲ್ಲಿ ಸ್ಪಷ್ಟವಾಗಲಿದೆ. ಈಗಾಗಲೇ ನಾವು ಸಹ ರಥಯಾತ್ರೆ ನಡೆಸಲು ಸಿದ್ಧತೆ ನಡೆಸಿರುವುದಾಗಿ ಬೊಮ್ಮಾಯಿ ತಿಳಿಸಿದರು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ: ಬೆಳಗಾವಿಯಲ್ಲಿ ಶ್ರೀರಾಮಸೇನೆ ಅಧ್ಯಕ್ಷನ ಮೇಲೆ ಗುಂಡಿನ ದಾಳಿ ನಡೆಸಿದ ಕುರಿತು ಮಾತನಾಡಿದ ಮುಖ್ಯಮಂತ್ರಿ ಅವರು, ಈಗಾಗಲೇ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಅಭಿಪ್ರಾಯಗಳು ಬೇರೆ ಬೇರೆ ಇರಬಹುದು. ಆದರೆ ಹಿಂಸೆಗೆ ಇಳಿಯಬಾರದು. ಅವರ ಚಿಕಿತ್ಸೆ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಬೊಮ್ಮಾಯಿ ತಿಳಿಸಿದರು.