ಹಾವೇರಿ: ಭಯ ಸೃಷ್ಟಿಸಿರುವ ಕೊರೊನಾ ವೈರಸ್ ಕುರಿತು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಆರೋಗ್ಯ ಅಧಿಕಾರಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.
ಕೋವಿಡ್ 19 ಭೀತಿಗೆ ಮುನ್ನೆಚ್ಚರಿಕೆ ಕ್ರಮ ಈಚೆಗೆ ಜಿಲ್ಲಾಡಳಿತ ಕೊರೊನಾ ವೈರಸ್ ಜಾಗೃತಿ ಮೂಡಿಸಲು ನಿರ್ಲಕ್ಷ್ಯ ವಹಿಸಿದ ಕುರಿತು ಈಟಿವಿ ಭಾರತ ಸುದ್ದಿ ಪ್ರಸಾರ ಮಾಡಿತ್ತು. ಈ ಕುರಿತಂತೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ, ವೈರಸ್ ಬಗ್ಗೆ ಭಯ ಪಡುವ ಅಗತ್ಯವಿಲ್ಲ, ಎಚ್ಚರಿಕೆ ಇರಲಿ ಎಂದು ತಿಳಿಸಿದರು.
ಜಿಲ್ಲಾಡಳಿತ ಗರಿಷ್ಠ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಪ್ರಕರಣ ಪತ್ತೆಯಾಗಿಲ್ಲ. ಜಿಲ್ಲೆಗೆ ಆಗಮಿಸುವವರನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದರು.
ವಿದೇಶದಿಂದ ಬಂದವರಲ್ಲಿ ಕೊರೊನಾ ವೈರಸ್ ಪತ್ತೆಯಾಗಿರದಿದ್ದರೂ, ನಾಲ್ಕು ವಾರಗಳ ಕಾಲ ನಿಗಾದಲ್ಲಿ ಇರಿಸಲಾಗುವುದು. ಕೊರೊನಾ ವೈರಸ್ ಪತ್ತೆಯಾದ ದೇಶಗಳಿಗೆ ಪ್ರವಾಸ ಕೈಗೊಳ್ಳದಂತೆ ನಾಗರಿಕರಿಗೆ ಸಲಹೆ ನೀಡಲಾಗಿದೆ. ವಿದೇಶದಿಂದ ಆಗಮಿಸಿದ ವ್ಯಕ್ತಿಗಳಲ್ಲಿ ಶೀತ, ನೆಗಡಿ, ಕೆಮ್ಮು, ಜ್ವರ ಇತ್ಯಾದಿ ರೋಗ ಲಕ್ಷಣಗಳು ಕಂಡು ಬಂದರೆ ಸ್ವಯಂ ಚಿಕಿತ್ಸೆ ನಡೆಸದೆ ಆಸ್ಪತ್ರೆಗೆ ಬಂದು ದಾಖಲಾಗುವಂತೆ ತಿಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಸೋಂಕು ಪೀಡಿತರಿಗೆ ತಪಾಸಣೆಗಾಗಿ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ ಹಾಗೂ ಸಿ.ಹೆಚ್.ಸಿ.ಗಳಲ್ಲಿ ಪ್ರತ್ಯೇಕ ವಾರ್ಡ್‍ಗಳನ್ನು ಆರಂಭಿಸಿಲಾಗಿದೆ. ಅಲ್ಲದೆ ವಾರ್ಡ್‍ಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಔಷಧಗಳು ಲಭ್ಯವಿರುವಂತೆ ನೋಡಿಕೊಳ್ಳಬೇಕು. ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ತರಬೇತಿ ನೀಡಬೇಕು. ಆರೋಗ್ಯ ಸಚಿವಾಲಯದ ಮಾರ್ಗಸೂಚಿ ಪ್ರಕಾರ ವೈರಸ್ ತಡೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸಮಿತಿಗಳನ್ನು ರಚಿಸಲಾಗಿದೆ. ಪ್ರತಿ ದಿನ ಸಂಜೆ 6ಗಂಟೆಯ ಒಳಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ಈ ಕುರಿತು ವರದಿಯನ್ನು ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.