ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ಹಾವೇರಿ: ಬಿಜೆಪಿಯ ಭದ್ರಕೋಟೆಯಾಗಿದ್ದ ಹಾವೇರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವು 5 ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದೆ. ಜಿಲ್ಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಜಯದ ನಾಗಾಲೋಟ ಮುಂದುವರೆಸಿದ್ದು, ಶಿಗ್ಗಾಂವಿಯಲ್ಲಿ ನಾಲ್ಕನೇ ಬಾರಿ ವಿಜಯದ ಪತಾಕೆ ಹಾರಿಸಿದ್ದಾರೆ.
ಪ್ರಥಮ ಬಾರಿಗೆ ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಚಿವ ಕೆ.ಬಿ.ಕೋಳಿವಾಡ ಪುತ್ರ ಪ್ರಕಾಶ ಕೋಳಿವಾಡ ಗೆದ್ದು ವಿಧಾನಸಭೆ ಪ್ರವೇಶಿಸಿದ್ದಾರೆ. ಜೆಡಿಎಸ್‌ನ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ನಾಲ್ಕಂಕಿಯ ಮತ ಪಡೆದು ಭರವಸೆ ಮೂಡಿಸಿದ್ದರೂ ಸಹ ವಿಫಲವಾಗಿದ್ದಾರೆ. ಜಿಲ್ಲೆಗೆ ಆಗಮಿಸಿದ್ದ ಬಿಜೆಪಿಯ ಅಮಿತ್ ಶಾ, ಜೆ.ಪಿ.ನೆಡ್ಡಾ, ಪ್ರಧಾನಿ ನರೇಂದ್ರ ಮೋದಿ ಕಿಚ್ಚ ಸುದೀಪ ಮತ್ತು ನಟಿ ಶೃತಿ ಪ್ರಚಾರ ಇಲ್ಲಿಯ ಮತದಾರರ ಮೇಲೆ ಯಾವುದೇ ಪ್ರಭಾವ ಬೀರಿಲ್ಲ. ಬದಲಿಗೆ ರಾಹುಲ್ ಗಾಂಧಿ ಭೇಟಿ ನೀಡಿದ್ದ ಹಾನಗಲ್ ಮತ್ತು ಪ್ರಿಯಾಂಕಾ ಗಾಂಧಿ ಆಗಮಿಸಿದ್ದ ಹಿರೇಕೆರೂರರಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದೆ.
ಹಾವೇರಿ ಜಿಲ್ಲೆ ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಮತದಾರ ಕೃಷಿ ಸಚಿವ ಬಿ.ಸಿ.ಪಾಟೀಲ್ಗೆ ಸೋಲಿನ ರುಚಿ ತೋರಿಸಿದ್ದು, ಯುಬಿ ಬಣಕಾರ ಅವರು 15,020 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇನ್ನು, ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಪ್ರಕಾಶ್ ಕೋಳಿವಾಡ ಅವರು 9,800 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ. ಇನ್ನು ಬ್ಯಾಡಗಿ ಕ್ಷೇತ್ರದ ಹಾಲಿ ಶಾಸಕರಾಗಿದ್ದ ಬಿಜೆಪಿ ಅಭ್ಯರ್ಥಿ ವಿರೂಪಾಕ್ಷಪ್ಪ ಬಳ್ಳಾರಿಗೆ ಬ್ಯಾಡಗಿ ಕ್ಷೇತ್ರದ ಜನ ಸೋಲಿನ ರುಚಿ ತೋರಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಬಸವರಾಜ್ ಶಿವಣ್ಣನವರ್ 23,841 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಲಿ ಶಾಸಕ ಮತ್ತು ಅಭ್ಯರ್ಥಿ ಶ್ರೀನಿವಾಸ ಮಾನೆ ತಮ್ಮ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಹಾವೇರಿಯಲ್ಲಿ ಸರ್ಕಾರಿ ನೌಕರಿಗೆ ರಾಜೀನಾಮೆ ನೀಡಿ ರಾಜಕೀಯಕ್ಕೆ ಬಂದಿದ್ದ ಬಿಜೆಪಿಯ ಗವಿಸಿದ್ದಪ್ಪ ಕಾಂಗ್ರೆಸ್‌ನ ರುದ್ರಪ್ಪ ಲಮಾಣಿ ವಿರುದ್ದ 11,915 ಮತಗಳಿಂದ ಸೋತಿದ್ದಾರೆ. ಕಾಂಗ್ರೆಸ್ ಜಯಭೇರಿಯಾಗುತ್ತಿದ್ದಂತೆ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಂಭ್ರಮ ಮುಗಿಲುಮುಟ್ಟಿತ್ತು. ಪಟಾಕಿ ಸಿಡಿಸಿ, ಕುಣಿಯುವ ಮೂಲಕ ಕಾರ್ಯಕರ್ತರು ಸಂಭ್ರಮ ವ್ಯಕ್ತಪಡಿಸಿದರು.
ಇದನ್ನೂ ಓದಿ:12 ಸಚಿವರು, 56 ಹೊಸಮುಖ, 62 ಹಾಲಿ ಶಾಸಕರಿಗೆ ಸೋಲಿನ ರುಚಿ ತೋರಿಸಿದ ಮತದಾರ..!