ಹಾವೇರಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 1 ಲಕ್ಷ 30 ಸಾವಿರ ರೂಪಾಯಿ ದಂಡ ವಿಧಿಸಿ ಹಾವೇರಿ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿತು.
ನ್ಯಾಯಾಧೀಶ ನಿಂಗೌಡ ಪಾಟೀಲ ಅವರು ಪ್ರಕರಣದ ವಿಚಾರಣೆ ನಡೆಸಿ, ಶಿಕ್ಷೆ ವಿಧಿಸಿ ಆದೇಶ ಪ್ರಕಟಿಸಿದರು. ಅಪರಾಧಿಗೆ ವಿಧಿಸಿರುವ 1.30 ಲಕ್ಷ ರೂ ದಂಡದ ಹಣದಲ್ಲಿ ಸಂತ್ರಸ್ತೆಗೆ 1 ಲಕ್ಷ ರೂ ಪರಿಹಾರವಾಗಿ ನೀಡಬೇಕು. ರಾಜ್ಯ ಸರ್ಕಾರದ ನೊಂದವರ ಪರಿಹಾರ ನಿಧಿ ಯೋಜನೆಯಡಿ ಬಾಲಕಿಗೆ 4 ಲಕ್ಷ ರೂ ಪರಿಹಾರ ಒದಗಿಸಬೇಕು ಎಂದು ನ್ಯಾಯಾಧೀಶರು ಆದೇಶದಲ್ಲಿ ತಿಳಿಸಿದ್ದಾರೆ.
ಪ್ರಕರಣದ ವಿವರ: ಆರೋಪಿಯು ಮಾರ್ಚ್ 15, 2020ರಂದು ಬಾಲಕಿಯನ್ನು ಪುಸಲಾಯಿಸಿ ಅಪಹರಿಸಿ, ರಾಣೇಬೆನ್ನೂರ ತಾಲೂಕಿನ ಗ್ರಾಮವೊಂದರ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ. ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಜೀವ ತೆಗೆಯುವುದಾಗಿ ಬೆದರಿಕೆ ಹಾಕಿದ್ದ. ಘಟನೆಯ ಬಳಿಕ ಈ ಕುರಿತಂತೆ ಆಡೂರ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ 363, 376(2)(ಎನ್),376(3), ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿತ್ತು.
ತನಿಖಾಧಿಕಾರಿ ಸಿಪಿಐ ಎಸ್.ಆರ್.ಗಣಾಚಾರಿ ಪ್ರಕರಣದ ತನಿಖೆ ನಡೆಸಿ, ಕೋರ್ಟ್‌ಗೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಇದೀಗ ಕಠಿಣ ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ವಿಜಯಕುಮಾರ ಶಂಕರಗೌಡ ಪಾಟೀಲ್ ವಾದ ಮಂಡಿಸಿದ್ದರು.
ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ಸಂತ್ರಸ್ತೆ ಮದುವೆಯಾಗುವುದಾಗಿ ಭರವಸೆ: ಪ್ರಕರಣ ರದ್ದುಪಡಿಸಿದ ಹೈಕೋರ್ಟ್
ಕಳೆದ ವಾರ ಅತ್ಯಾಚಾರ ಅಪರಾಧಿ ಶಿಕ್ಷೆ ವಿಧಿಸಿದ್ದ ದಾವಣಗೆರೆ ಕೋರ್ಟ್:ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣವೊಂದರಲ್ಲಿ ಅಪರಾಧಿಗೆ ದಾವಣಗೆರೆ ಜಿಲ್ಲಾ ಸತ್ರ ನ್ಯಾಯಾಲಯವು ಇತ್ತೀಚೆಗೆ 20 ವರ್ಷಗಳ ಜೈಲು ಶಿಕ್ಷೆ ಮತ್ತು 17 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶಿಸಿತ್ತು. ಇನ್ನು ಸಂತ್ರಸ್ತ ಬಾಲಕಿಗೆ ಸರ್ಕಾರದಿಂದ 5 ಲಕ್ಷ ರೂ ಪರಿಹಾರ ನೀಡುವಂತೆ ಕೋರ್ಟ್ ಆದೇಶಿಸಿತ್ತು.
ಬಾಲಕಿಯನ್ನು ಪುಸಲಾಯಿಸಿ ಹರಿಹರ ತಾಲೂಕಿನ ವ್ಯಕ್ತಿ ಕರೆದೊಯ್ದು ಅತ್ಯಾಚಾರ ಎಸಗಿದ್ದ. ಈ ಬಗ್ಗೆ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅಂದಿನ ತನಿಖಾಧಿಕಾರಿ ಶಿವಪ್ರಸಾದ್.ಎಂ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರಿ ಅಭಿಯೋಜಕರಾದ ಸುನಂದಾ ಐ.ಮಡಿವಾಳ್ ಸಂತ್ರಸ್ತೆ ಪರ ವಾದ ಮಂಡಿಸಿದ್ದರು.