ಹಾವೇರಿ:ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರ ಮುಕ್ತ ಕರ್ನಾಟಕ ಅಭಿಯಾನ ನಡೆಸಲಿದೆ. 9 ತಂಡಗಳಾಗಿ ರಾಜ್ಯಾದ್ಯಂತ ಪ್ರವಾಸ ನಡೆಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯಾದ್ಯಂತ ಪ್ರವಾಸ ಮಾಡುವ ತಂಡಗಳು ಭ್ರಷ್ಟ, ಲೂಟಿಕೋರ ಸರ್ಕಾರದ ವಿರುದ್ಧ ಜನಜಾಗೃತಿ ಮೂಡಿಸುವ ಕೆಲಸ ಮಾಡುತ್ತವೆ. ನರೇಂದ್ರ ಮೋದಿಯವರು ಅಧಿಕಾರಕ್ಕೆ ಬರುವ ಮುನ್ನ ನಾನು ತಿನ್ನುವುದಿಲ್ಲ, ತಿನ್ನಲು ಬಿಡುವುದಿಲ್ಲ ಅಂತಾ ಹೇಳಿದ್ದರು. ಆದರೆ, 40 ಪರ್ಸಂಟೇಜ್ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಟೀಕಿಸಿದರು.
ಮೋದಿಯವರು ಪ್ರಕರಣವನ್ನ ತನಿಖೆ ಮಾಡಿಸುತ್ತಾರೆ ಎಂದು ಭಾವಿಸಿದ್ದೆವು. ಆದರೆ ಅದು ಆಗಲಿಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ ತನಿಖೆಗೂ ಮುಂದಾಗಲಿಲ್ಲ. ಮೃತಪಟ್ಟ ಸಂತೋಷ ಪಾಟೀಲ್ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ಕೊಡಬೇಕು. ಸಂತೋಷ ಪಾಟೀಲ ಪತ್ನಿಗೆ ಸರ್ಕಾರಿ ನೌಕರಿ ಕೊಡಬೇಕು.
ದಿಂಗಾಲೇಶ್ವರ ಸ್ವಾಮೀಜಿಗಳು ಸಹ ಕಮೀಷನ್ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಮುಂದಿನ ವಾರದಿಂದ 224 ಕ್ಷೇತ್ರಗಳಲ್ಲೂ 40 ಪರ್ಸಂಟೇಜ್ ಸರ್ಕಾರದ ಬಗ್ಗೆ ಪ್ರತಿಭಟನೆ ಮಾಡುತ್ತೇವೆ. ಸರ್ಕಾರವನ್ನು ಬೆತ್ತಲೆ ಮಾಡುತ್ತೇವೆ ಎಂದು ಅವರು ತಿಳಿಸಿದರು.
ಇದನ್ನೂ ಓದಿ:ಎಲೆಕ್ಟ್ರಾನಿಕ್ ವಾಹನಗಳಿಗೆ ಬೆಂಕಿ ಅವಘಡ; ಕಂಪನಿಗಳಿಗೆ ಸಚಿವ ಗಡ್ಕರಿ ಎಚ್ಚರಿಕೆ