ಹಾವೇರಿ : ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ರಾಜೀನಾಮೆ ಪರ್ವ ಆರಂಭವಾಗಿದೆ. ಹಾವೇರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಂ.ಹಿರೇಮಠ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಈ ಕುರಿತಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಪತ್ರ ಕಳುಹಿಸಿದ್ದಾರೆ. ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದಾರೆ. ಇದರ ಪ್ರತಿಯನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರಿಗೂ ರವಾನಿಸಿದ್ದಾರೆ.
ಎಂ.ಎಂ ಹಿರೇಮಠ ಕಳೆದ ಬಹಳ ದಿನಗಳಿಂದ ಹಾವೇರಿ ಮೀಸಲು ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರು. ತಮ್ಮ ಜಾತಿ ಪ್ರಮಾಣಪತ್ರವನ್ನು 'ಬೇಡ ಜಂಗಮ' ಎಂದು ಪಡೆದಿದ್ದರು ಎನ್ನಲಾಗಿದೆ. ಆದರೆ, ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಮಾಜಿ ಸಚಿವ ರುದ್ರಪ್ಪ ಲಮಾಣಿ ಹೆಸರನ್ನು ವರಿಷ್ಠರು ಘೋಷಿಸಿದ್ದಾರೆ. ಇದರಿಂದ ಅಸಮಾಧಾನಗೊಂಡಿರುವ ಜಿಲ್ಲಾಧ್ಯಕ್ಷ ಮತ್ತು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೂ ಹೊರಬಂದಿದ್ದಾರೆ ಎಂಬ ಮಾಹಿತಿ ದೊರೆತಿದೆ.