ಹಾವೇರಿ: ಆರಕ್ಷತೆಯ ಕಾರ್ಯಕ್ರಮದಲ್ಲಿ ಊಟ ಮಾಡಿದ 50ಕ್ಕೂ ಅಧಿಕ ಜನರು ಅಸ್ವಸ್ಥಗೊಂಡ ಘಟನೆ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಚಪ್ಪರದಹಳ್ಳಿಯಲ್ಲಿ ನಡೆದಿದೆ. ಮದುವೆ ಮುಗಿಸಿಕೊಂಡು ಬಂದು, ಮನೆಯಲ್ಲಿನ ಆರಕ್ಷತೆಯ ಕಾರ್ಯಕ್ರಮದಲ್ಲಿ ಊಟ ಮಾಡಿದ ನಂತರ ಅಸ್ವಸ್ಥತೆ ಕಾಣಿಸಿಕೊಂಡಿದೆ. ಐದು ಜನರು ತೀವ್ರ ಅಸ್ವಸ್ಥಗೊಂಡಿದ್ದು, 40 ಕ್ಕೂ ಅಧಿಕ ಜನರಿಗೆ ರಟ್ಟಿಹಳ್ಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಶಂಕ್ರಪ್ಪ ಹಿತ್ತಲಮನಿ ಎಂಬುವರ ಮಗಳ ಆರಕ್ಷತೆಯ ಕಾರ್ಯಕ್ರಮದಲ್ಲಿ ಊಟ ಸೇವಿಸಿದವರಲ್ಲಿ ಅಸ್ವಸ್ಥತೆ ಕಾಣಿಸಿಕೊಂಡಿದೆ. ಸೋಮವಾರ ರಾತ್ರಿ ನಡೆದ ಕಾರ್ಯಕ್ರಮದಲ್ಲಿ ಊಟ ಮಾಡಿದ ಜನರಿಗೆ, ಮಂಗಳವಾರ ರಾತ್ರಿಯಿಂದ ವಾಂತಿ ಭೇದಿ ಕಾಣಿಸಿಕೊಂಡಿದೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ವಾಸನ ಗ್ರಾಮದಲ್ಲಿ ಮದುವೆ ಮುಗಿಸಿಕೊಂಡು ಬಂದಿದ್ದು ಚಪ್ಪರದಹಳ್ಳಿ ಆರಕ್ಷತೆಯ ಕಾರ್ಯಕ್ರಮದಲ್ಲಿ ಊಟದ ಸೇವಿಸಿದ ನಂತರ ಜನರು ಅಸ್ವಸ್ಥಗೊಂಡಿದ್ದಾರೆ.
ರಟ್ಟಿಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಕಲುಷಿತ ಆಹಾರ ಸೇವನೆಯಿಂದ ಜನರು ಅಸ್ವಸ್ಥರಾಗಿದ್ದಾರೆ ಎಂದು ಶಂಕಿಸಲಾಗಿದೆ. ತಾಲೂಕಾಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಆಹಾರವನ್ನ ಪರೀಕ್ಷೆಗೆ ಕಳಿಸಿದ್ದಾರೆ. ರಟ್ಟಿಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇತ್ತೀಚಿನ ಘಟನೆ:ಧಾರವಾಡದ ಜಿಲ್ಲೆಯನವಲಗುಂದ ತಾಲೂಕಿನ ಗುಡಿಸಾಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ನಡೆದ ಘಟನೆಯೊಂದರಲ್ಲಿ ಬಿಸಿಯೂಟ ಸೇವಿಸಿ 36 ಮಕ್ಕಳು ಅಸ್ವಸ್ಥಗೊಂಡಿದ್ದರು. ಮಧ್ಯಾಹ್ನ ಬಿಸಿಯೂಟದ ಅನ್ನದಲ್ಲಿ ಹಲ್ಲಿಯಂತ ಹುಳು ಕಂಡು ಬಂದಿತ್ತು. ಬಳಿಕ ಊಟ ಸೇವಿಸಿದ ಸುಮಾರು 36 ಮಕ್ಕಳು ವಾಂತಿ, ವಾಕರಿಕೆ ಮಾಡಿಕೊಂಡ ಪರಿಣಾಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.