ಹಾವೇರಿ: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ, ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ. ಹಿರೇಕೆರೂರು ಕ್ಷೇತ್ರದಲ್ಲಿ ಮಾಜಿ ಶಾಸಕ ಯು.ಬಿ.ಬಣಕಾರ ಹಾಗೂ ಅನರ್ಹ ಶಾಸಕ ಬಿ. ಸಿ. ಪಾಟೀಲ್ ನಡುವೆ ದೊಡ್ಡ ಪೈಪೋಟಿ ನಡೆಯುತ್ತಿದೆ. ಈ ನಡುವೆ ಯು. ಬಿ. ಬಣಕಾರ ಅವರಿಗೆ ಉಪಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೈ ತಪ್ಪುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಹಿರೇಕೆರೂರು ಕ್ಷೇತ್ರದಲ್ಲಿ ಉಪಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಲು ಮಾಜಿ ಶಾಸಕ ಯು.ಬಿ.ಬಣಕಾರ ಒಲವು ತೋರಿದ್ದರು. ಆದರೆ ಕಾಂಗ್ರೆಸ್ ಪಕ್ಷದ ಅನರ್ಹ ಶಾಸಕ ಬಿ.ಸಿ.ಪಾಟೀಲ್ ಅವರು ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಿದ ಹಿನ್ನೆಲೆ, ಅವರಿಗೆ ಉಪಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡುವುದು ಬಹುತೇಕ ಖಚಿತವಾಗಿದೆ ಎನ್ನಲಾಗಿದೆ.
ಈ ನಡುವೆ ಯು.ಬಿ.ಬಣಕಾರ ಅವರನ್ನು ಉಪಚುನಾವಣೆಗೆ ಸ್ಪರ್ಧಿಸುವಂತೆ ಬಿಜೆಪಿ ಕಾರ್ಯಕರ್ತರು ಹಾಗೂ ಅವರ ಅನುಯಾಯಿಗಳು ಒತ್ತಾಯ ಮಾಡಿದ್ದರು. ಹಾಗೆಯೇ ಬಿಜೆಪಿ ಟಿಕೆಟ್ ಸಿಗದೇ ಇದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲುವಂತೆಯೂ ಕೂಡ ಪ್ರತಿಭಟನೆ ಮಾಡಿದ್ದರು.
ಇದನ್ನೆಲ್ಲಾ ಮನಗೊಂಡ ಬಿಜೆಪಿ ಸರ್ಕಾರ, ಮುಂದೆ ಆಗುವ ಅನಾಹುತವನ್ನು ತಣ್ಣಗೆ ಮಾಡಲು ಯು.ಬಿ.ಬಣಕಾರ ಅವರಿಗೆ ಕೃಷಿ ಉತ್ಪನ್ನ ಮಾರುಕಟ್ಟೆ ನಿಗಮ ಮಂಡಳಿ ಅಧ್ಯಕ ಸ್ಥಾನ ನೀಡಿ, ಈ ಮೂಲಕ ಉಪಚುನಾವಣೆಯಿಂದ ಬಣಕಾರ್ ಅವರು ಸೈಡ್ಲೈನ್ ಆಗುವಂತೆ ಮನವೊಲಿಸಲಾಗಿದೆ ಎನ್ನಲಾಗಿದೆ. ಒಟ್ಟಿನಲ್ಲಿ ಬಿಜೆಪಿ ಸರ್ಕಾರ ಬಂಡಾಯ ಶಮನ ಮಾಡಲು ಒಂದು ಕಲ್ಲಿನಿಂದ ಎರಡು ಹಕ್ಕಿ ಹೊಡೆದಂತೆ, ಯು. ಬಿ. ಬಣಕಾರ ಅವರಿಗೆ ನಿಗಮ ಮಂಡಳಿ ಸ್ಥಾನ ನೀಡಿ, ಬಿ.ಸಿ.ಪಾಟೀಲ್ ಅವರಿಗೆ ಟಿಕೆಟ್ ನೀಡಲು ಮುಂದಾಗಿದೆ.