ಹಾವೇರಿ : ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ಅಕ್ಕಿ ಬದಲು ಹಣ ಕೊಡುವುದಕ್ಕೆ ಸಾರ್ವಜನಿಕರು ವಿರೋಧ ಮಾಡುತ್ತಿದ್ದಾರೆ ಎಂಬ ವಿಚಾರ ಸುಳ್ಳು ಅಂತಾ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಹೇಳಿದರು.
ಹಾವೇರಿಯಲ್ಲಿ ಮಾತನಾಡಿದ ಅವರು, ಸದ್ಯದ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲ. ಹೀಗಾಗಿ, ಹಣ ನೀಡುತ್ತಿದ್ದೇವೆ. ಮಾರುಕಟ್ಟೆಯಲ್ಲಿರುವ ಅಕ್ಕಿ ಖರೀದಿಗೆ ಏನೂ ತೊಂದರೆ ಇಲ್ಲ, ಇದರಿಂದ ಜನರು ಸಂತೃಪ್ತರಾಗುತ್ತಾರೆ ಎಂಬ ಉದ್ದೇಶದಿಂದ ಯೋಜನೆ ಜಾರಿಗೆ ತಂದಿದ್ದೇವೆ. ಎಲ್ಲಾ ಗ್ಯಾರಂಟಿ ಘೋಷಣೆಗಳನ್ನು ಒಂದೊಂದಾಗಿ ಜಾರಿಗೆ ತರುತ್ತೇವೆ, ನಮ್ಮ ಬಜೆಟ್ ಇನ್ನೂ ಮಂಡನೆ ಆಗಿಲ್ಲ ಎಂದು ತಿಳಿಸಿದರು.
ಗ್ಯಾರಂಟಿ ಹೆಸರಿನಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಣ ನೀಡುತ್ತಿಲ್ಲ ಎಂಬ ವಿಚಾರ ಸತ್ಯಕ್ಕೆ ದೂರವಾದದ್ದು. ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡುವ ಕುರಿತು ಚರ್ಚೆ ಮಾಡಲಾಗುತ್ತಿದೆ. ಅಭಿವೃದ್ಧಿ ಕಾರ್ಯಗಳಿಗೆ ಹಣ ತಡೆ ಹಿಡಿಯುವ ಪ್ರಮೆಯವೇ ಇಲ್ಲ. ಕ್ಯಾಬಿನೆಟ್ನಲ್ಲಿ ಮುಖ್ಯಮಂತ್ರಿಗಳು ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡುವಂತೆ ಹೇಳಿದ್ದಾರೆ ಎಂದರು.
ಗೋಹತ್ಯೆ ನಿಷೇಧ, ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯದಂತೆ ಕರಾವಳಿ ಸ್ವಾಮೀಜಿಗಳ ಒತ್ತಾಯದ ಕುರಿತು ಮಾತನಾಡಿದ ಅವರು, ಈ ವಿಚಾರದ ಕುರಿತು ಪ್ರತಿಕ್ರಿಯೆ ಕೊಡುವ ಅವಶ್ಯಕತೆ ಇಲ್ಲ ಎಂದರು. ಬಳಿಕ, ಏಕರೂಪ ನಾಗರಿಕ ಸಂಹಿತೆ ಜಾರಿ ಕುರಿತು ನನ್ನ ಗಮನಕ್ಕೆ ಬಂದಿಲ್ಲ. ಆ ಕುರಿತಂತೆ ಮಾತನಾಡುವ ಅವಶ್ಯಕತೆ ಏನಿದೆ ಎಂದು ತಿಳಿಸಿದರು.