ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾದ ಶಿವಸೇನಾ ಸಂಸದ ಸಂಜಯ್ ರಾವುತ್ ಅವರು ಗುರುವಾರ ತಮ್ಮ ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾದರು. ಉದ್ಧವ್ ಠಾಕ್ರೆ ಅವರ ಪುತ್ರ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಆದಿತ್ಯ ಠಾಕ್ರೆ ಅವರು ಉಪನಗರ ಬಾಂದ್ರಾದಲ್ಲಿರುವ ಠಾಕ್ರೆ ಅವರ ಖಾಸಗಿ ನಿವಾಸ 'ಮಾತೋಶ್ರೀ' ಹೊರಗೆ ರಾವುತ್ ಅವರನ್ನು ಸ್ವಾಗತಿಸಿದರು.
ತಾಳಕ್ಕೆ ತಕ್ಕಂತೆ ಕುಣಿಯುತ್ತಿವೆ: ನಂತರ ಸಂಜಯ್ ರಾವುತ್ ಅವರೊಂದಿಗೆ ಜಂಟಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಉದ್ಧವ್ ಠಾಕ್ರೆ, ನ್ಯಾಯಾಂಗವನ್ನು ಸರ್ಕಾರದ ನಿಯಂತ್ರಣಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ ಎಂದು ಕಾನೂನು ಸಚಿವ ಕಿರಣ್ ರಿಜಿಜು ವಿರುದ್ಧ ವಾಗ್ದಾಳಿ ನಡೆಸಿದರು. ತನಿಖಾ ಸಂಸ್ಥೆಗಳು ಕೇಂದ್ರದ ತಾಳಕ್ಕೆ ತಕ್ಕಂತೆ ಕುಣಿಯುತ್ತಿವೆ ಎಂದು ಆರೋಪಿಸಿದರು.
ಕಾನೂನು ಸಚಿವರು ನ್ಯಾಯಾಂಗವನ್ನು ಸರ್ಕಾರದ ನಿಯಂತ್ರಣಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ. ಈ ಬಗ್ಗೆ ಜನರು ಚಿಂತಿಸಬೇಕು. ಕೇಂದ್ರವು ಸೇಡಿನ ರಾಜಕಾರಣ ಮಾಡುತ್ತಿದೆ ಎಂಬುದು ನಿನ್ನೆಯ ಆದೇಶ ಸ್ಪಷ್ಟಪಡಿಸಿದೆ. ನಾನು ನ್ಯಾಯಾಂಗಕ್ಕೆ ಕೃತಜ್ಞನಾಗಿದ್ದೇನೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.