ರಾಣೆಬೆನ್ನೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಆಡಳಿತದಲ್ಲಿದ್ದ ಸಮಯದಲ್ಲಿ 17 ಶಾಸಕರು ರಾಜೀನಾಮೆ ಕೊಟ್ಟರು. ಇದಕ್ಕೆ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರಣ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು.
ನಗರದ ಮುನ್ಸಿಪಲ್ ಮೈದಾನದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಪಕ್ಷದ ಅಭ್ಯರ್ಥಿ ಕೆ.ಬಿ.ಕೋಳಿವಾಡ ಪರ ಮತಯಾಚಿಸಿ ಅವರು ಮಾತನಾಡಿದರು.
ಮೋದಿ ಅವರು ಪ್ರಜಾಪ್ರಭುತ್ವ ಕಗ್ಗೊಲೆ ಮಾಡಿದ್ದಾರೆ. ಶಾಸಕರಿಗೆ ಹಣದ ಆಮಿಷ ತೋರಿಸಿ ರಾಜೀನಾಮೆ ಕೊಡಿಸಿದರು. ರಾಣೆಬೆನ್ನೂರು ಕ್ಷೇತ್ರದ ಅನರ್ಹ ಶಾಸಕ ಆರ್.ಶಂಕರ್ ಕೂಡ ಆಮಿಷಕ್ಕೊಳಗಾಗಿ ಓಡಿ ಹೋದ ಎಂದರು.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ 2018ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಶಂಕರ್ ಕುರುಬ ಸಮುದಾಯಕ್ಕೆ ಸೇರಿದವರಾಗಿದ್ದ ಪರಿಣಾಮ ಸಿದ್ದರಾಮಯ್ಯ ಕೋಳಿವಾಡ ಪರ ಮತಯಾಚನೆ ಮಾಡಲಿಲ್ಲ ಎಂದು ಜನರ ಮನಸ್ಸಿನಲ್ಲಿ ತುಂಬಿದ್ದಾರೆ. ಆದರೆ, ನನ್ನ ರಾಜಕೀಯ ಜೀವನದಲ್ಲಿ ಕಾಂಗ್ರೆಸ್ಗೆ ಬಿಟ್ಟು ಬೇರೆ ಪಕ್ಷಕ್ಕೆ ಎಂದೂ ಬೆಂಬಲ ಕೊಟ್ಟಿಲ್ಲ. ನನಗೆ ಜಾತಿಗಿಂತ ಪಕ್ಷ ಮುಖ್ಯ ಎಂದರು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಎಸ್.ಆರ್.ಪಾಟೀಲ್, ಹೆಚ್.ಆಂಜನೇಯ, ಶಾಸಕ ಎಸ್.ರಾಮಪ್ಪ ಇದ್ದರು.