ಹಾವೇರಿ: ವೇಗವಾಗಿ ಚಲಿಸುತ್ತಿದ್ದ ಕಾರು ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ನೀರಲಗಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ. ಊರಿಗೆ ತೆರಳಲು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಕ್ಕಾಗಿ ಕಾಯುತ್ತಾ ನಿಂತಿದ್ದ ವೇಳೆ ವ್ಯಕ್ತಿಗಳ ಮೇಲೆ ಕಾರು ಹರಿದು ದುರ್ಘಟನೆ ನಡೆದಿದೆ ಎನ್ನಲಾಗಿದೆ. ಮೃತರನ್ನು ವಿರೂಪಾಕ್ಷಪ್ಪ ಕಾಳಿ ಮತ್ತು ಚಿದಾನಂದ ಕುರುಬರ ಎಂದು ಗುರುತಿಸಲಾಗಿದೆ.
ನೀರಲಗಿ ಗ್ರಾಮದಿಂದ ಶಿಗ್ಗಾಂವಿ ಪಟ್ಟಣಕ್ಕೆ ಹೊರಟ್ಟಿದ್ದ ವೇಳೆ ಈ ಅವಘಡ ಸಂಭವಿಸಿದೆ. ಏಕಾಏಕಿ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ವಿರೂಪಾಕ್ಷಪ್ಪ ಸಾವನ್ನಪ್ಪಿದ್ದಾನೆ. ಇನ್ನೋರ್ವ ವ್ಯಕ್ತಿ ಚಿದಾನಂದ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ಹೆದ್ದಾರಿ ತಡೆದು ಪ್ರತಿಭಟನೆ:ಈ ಮಧ್ಯೆ ಅಪಘಾತ ನಡೆದು ಬಹಳ ಸಮಯವಾದರೂ ಆ್ಯಂಬುಲೆನ್ಸ್ ಬಾರದ ಹಿನ್ನೆಲೆ ಚಿದಾನಂದ ಸಾವನ್ನಪ್ಪಿದ್ದಾನೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸರಿಯಾದ ಸಮಯಕ್ಕೆ ಆ್ಯಂಬುಲೆನ್ಸ್ ಬಾರದಿದ್ದಕ್ಕೆ ಪ್ರತಿಭಟನೆ ನಡೆಸಿದ ಗ್ರಾಮಸ್ಥರು, ಗಂಟೆಗೂ ಹೆಚ್ಚು ಕಾಲ ಹೆದ್ದಾರಿ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಧಾವಿಸಿದ ತಡಸ ಪೊಲೀಸರು ಪರಿಸ್ಥಿತಿ ಶಾಂತಗೊಳಿಸಿದರು. ತಡಸ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇದನ್ನೂ ಓದಿ:ನಾಗಮಂಗಲ ಬಳಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ನಾಲ್ವರು ದುರ್ಮರಣ