ಕಲಬುರಗಿ:ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್ಐ) ನೇಮಕಾತಿ ಅಕ್ರಮದ ತನಿಖೆ ನಡೆಸುತ್ತಿರುವ ಸಿಐಡಿ ಮತ್ತೊಬ್ಬ ಅಭ್ಯರ್ಥಿಯನ್ನು ಅರೆಸ್ಟ್ ಮಾಡಿದೆ. ಸಂಜೀವ ಕುಮಾರ್ ಮುರಡಿ ಬಂಧಿತ ಆರೋಪಿ. ಜೇವರ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡಿ ಗ್ರೂಪ್ ನೌಕರನಾಗಿರುವ ಈತ, ಕಲಬುರಗಿ ನಗರದ ರೇಷ್ಮಿ ಕಾಲೇಜಿನಲ್ಲಿ ಪಿಎಸ್ಐ ಪರೀಕ್ಷೆ ಬರೆದಿದ್ದಾನೆ. ಕಲ್ಯಾಣ ಕರ್ನಾಟಕದ ಗ್ರಾಮೀಣ ಸಾಮಾನ್ಯ ಕೋಟಾದಡಿ ಪರೀಕ್ಷೆ ಬರೆದು 14ನೇ ರ‌್ಯಾಂಕ್ ಪಡೆದು ಆಯ್ಕೆಯೂ ಆಗಿದ್ದನು.
ಸಂಜೀವ ಕುಮಾರ್ ಮೈಕ್ರೋ ಬ್ಲೂಟೂತ್ ಬಳಸಿ ಪರೀಕ್ಷೆಯಲ್ಲಿ ಅಕ್ರಮವೆಸಗಿ ನೇಮಕಗೊಂಡಿದ್ದಾನೆ ಎನ್ನಲಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ತನಿಖಾಧಿಕಾರಿಗಳು ಅಕ್ರಮದ ಜಾಲ ಭೇದಿಸುತ್ತ ಈತನನ್ನು ಬಂಧಿಸಿದ್ದಾರೆ. ಈ ಕುರಿತಂತೆ ಕಲಬುರಗಿ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಸಿಐಡಿ ಆರೋಪಿಯ ವಿಚಾರಣೆ ನಡೆಯುತ್ತಿದೆ. ಕಲಬುರಗಿಯಲ್ಲಿ ಈವರೆಗೆ ಪಿಎಸ್ಐ ಪರೀಕ್ಷೆ ಅಕ್ರಮದಲ್ಲಿ ಭಾಗಿಯಾದ 55ಕ್ಕೂ ಹೆಚ್ಚು ಆರೋಪಿಗಳನ್ನು ಸಿಐಡಿ ಬಂಧಿಸಿದೆ.
ಹಗರಣದ ಮತ್ತೋರ್ವ ಆರೋಪಿ ಕಲ್ಲಪ್ಪ ಅಲ್ಲಾಪೂರ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕಲಬುರಗಿಯ 3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿದೆ. ಈತ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಚಂದ್ರಶೇಖರ ಕರೋಶಿ ಅವರಿದ್ದ ಪೀಠ ಆರೋಪಿ ಜಾಮೀನಿಗೆ ಅರ್ಹನಲ್ಲ ಮತ್ತು ತನಿಖೆಯಲ್ಲಿ ಈತನ ವಿರುದ್ಧ ಸಾಕಷ್ಟು ಸಾಕ್ಷಾಧಾರಗಳು ಕಂಡುಬಂದಿರುವ ಕಾರಣಕ್ಕೆ ಜಾಮೀನು ನಿರಾಕರಿಸಿದೆ.