ಬೆಂಗಳೂರು :ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಹೆಚ್ಚಾಗಿರುವ ಹಿನ್ನೆಲೆ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತ ಎಲ್ಲ ರೀತಿಯ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಶನಿವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಿ ಎಸ್ ಯಡಿಯೂರಪ್ಪ ಜೊತೆ ಮುಂಗಾರು ಪ್ರವಾಹ ಪರಿಸ್ಥಿತಿ ಕುರಿತಂತೆ ಜಿಲ್ಲಾಧಿಕಾರಿಗಳ ಜೊತೆ ನಡೆದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು.
ಈಗಾಗಲೇ ಕಲ್ಯಾಣ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಪರಿಣಾಮ ಅನೇಕ ಕಡೆ ನದಿ, ಹಳ್ಳಕೊಳ್ಳ ತುಂಬಿ ಹರಿಯುತ್ತಿದ್ದು, ಪ್ರವಾಹ ಉಂಟಾಗಿದೆ. ಕಲಬುರಗಿಯಲ್ಲೂ ನೆರೆ ಹಾವಳಿ ಉಂಟಾಗದಂತೆ ತಕ್ಷಣವೇ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕೆಂದು ಸೂಚಿಸಿದರು. ಕಲಬುರಗಿ ಜಿಲ್ಲೆಯ ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು ಗ್ರಾಮೆಲೆಕ್ಕಿಗರು, ಕಂದಾಯ ನೀರಿಕ್ಷಕರು ಕೇಂದ್ರ ಸ್ಥಾನದಲ್ಲಿಯೇ ವಾಸ್ತವ್ಯ ಹೂಡಿ ಪರಿಸ್ಥಿತಿಯನ್ನು ನಿಭಾಯಿಸಬೇಕು. ಕಾಳಜಿ ಕೇಂದ್ರಕ್ಕೆ ಬರುವ ನಿರಾಶ್ರಿತ ಜನರಿಗೆ ಸರ್ಕಾರ ಹೊರಡಿಸಲಾಗಿರುವ ಕೋವಿಡ್-19 ಸುರಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸಲಹೆ ನೀಡಿದ್ರು.
ಪ್ರವಾಹ ಸಂದರ್ಭದಲ್ಲಿ ಕಾಳಜಿ ಕೆಂದ್ರಗಳನ್ನು ತೆರೆಯಬೇಕಾದಲ್ಲಿ ಬಿಸಿಎಂ, ಸಮಾಜ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ನಿಲಯಗಳನ್ನು ಉಪಯೋಗಿಸಲು ಅನುಕೂಲವಾಗುವಂತೆ ಕಾಳಜಿ ಕೇಂದ್ರಗಳ ಮಾಹಿತಿಯನ್ನು ಪಡೆದುಕೊಂಡು ಮೂಲಸೌಕರ್ಯವನ್ನು ಒದಗಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಆದೇಶಿಸಿದರು. ಜೊತೆಗೆ ಕಾಳಜಿ ಕೇಂದ್ರಗಳಲ್ಲಿ ನಿರಾಶ್ರಿತರಿಗೆ ಅಗತ್ಯವಾದ ಪ್ರಾಥಮಿಕ ಚಿಕಿತ್ಸಾ ಸೌಲಭ್ಯವನ್ನು ಒದಗಿಸಲು ಅವಶ್ಯಕತೆ ಇರುವ ಎಲ್ಲಾ ರೀತಿ ಸಲಕರಣೆಗಳು, ಔಷಧಿಗಳನ್ನು ಸಂಗ್ರಹಿಸಿಡಬೇಕೆಂದು ಹೇಳಿದರು.