ಕಲಬುರಗಿ:ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಂಕಲ್ಪ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಇಂದು ನಡೆಯುವ ಸಮಾವೇಶಕ್ಕೆ ಕಾಂಗ್ರೆಸ್ ನಾಯಕರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.
ರಾಜಾಪುರದಲ್ಲಿರುವ ಜೈ ಭವಾನಿ ಕಲ್ಯಾಣ ಮಂಟಪದಲ್ಲಿ ಜರುಗಲಿರುವ ಸಂಕಲ್ಪ ಸಮಾವೇಶ ಸಮಾರಂಭವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಉದ್ಘಾಟಿಸಲಿದ್ದಾರೆ. ಜೊತೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಸಿಡಬ್ಲೂಸಿ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಹಿರಿಯ ನಾಯಕ ಹೆಚ್.ಮುನಿಯಪ್ಪ, ಜಿ.ಪರಮೇಶ್ವರ್, ಮಾಜಿ ಗೃಹ ಸಚಿವ ಎಂ.ಬಿ. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರುಗಳಾದ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಸಲೀಂ ಅಹ್ಮದ್ ಸೇರಿದಂತೆ ಕಲಬುರಗಿ, ಯಾದಗಿರಿ, ರಾಯಚೂರು, ಬೀದರ್, ಬಳ್ಳಾರಿ, ಕೊಪ್ಪಳ ಜಿಲ್ಲೆಗಳ ಶಾಸಕರು ಹಾಗೂ ಮುಖಂಡರು ಭಾಗಿಯಾಗಲಿದ್ದಾರೆ.