ಕಲಬುರಗಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಶರತ್ ಬಿ. ಜಿಲ್ಲೆಯ ಪ್ರಮುಖ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಕಳೆದ 15 ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಪ್ರಕರಣ ಬರುತ್ತಿವೆ. ಜೊತೆಗೆ ಸಾವಿನ ಸಂಖ್ಯೆ ಸಹ ಹೆಚ್ಚುತ್ತಿದೆ. ಈ ಹಿನ್ನೆಲೆ ಮುಂದಿನ ದಿನದಲ್ಲಿ ಇನ್ನು ಹೆಚ್ಚಿನ ಗುಣಮಟ್ಟದ ವೈದ್ಯಕೀಯ ವ್ಯವಸ್ಥೆ, ಹಾಸಿಗೆ ಹೆಚ್ಚಳ ಸೇರಿ ಆಸ್ಪತ್ರೆಗಳ ಮೂಲ ಸೌಲಭ್ಯ ಹೆಚ್ಚಿಸುವ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು.
ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರದಿಂದ ಮಾತ್ರ ಕೊರೊನಾ ತಡೆಯಲು ಸಾಧ್ಯವಿದ್ದು, ಜಿಲ್ಲೆಯ ಜನತೆ ಇದನ್ನು ತಪ್ಪದೆ ಪಾಲಿಸಬೇಕು. ಅನಗತ್ಯ ಓಡಾಟ ಹಾಗೂ ಗುಂಪಾಗಿ ಸೇರಬಾರದು. ಆಗಾಗ ಸಾಬೂನಿನಿಂದ ಕೈ ತೊಳೆದುಕೊಳ್ಳಬೇಕು ಮತ್ತು ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಮನೆಯಲ್ಲಿ ದೀರ್ಘ ಕಾಯಿಲೆಯಿಂದ ಬಳಲುತ್ತಿರುವವರು, ಹಿರಿಯ ನಾಗರಿಕರು ಹಾಗೂ ಮಕ್ಕಳು ಇದ್ದಲ್ಲಿ ಅವರ ಆರೋಗ್ಯದ ಬಗ್ಗೆ ಕುಟುಂಬಸ್ಥರು ವಿಶೇಷ ಕಾಳಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದರು.