ಕಲಬುರಗಿ: ಲೋಕಸಭೆ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಬಿಸಿಲನ್ನು ಲೆಕ್ಕಿಸದೇ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮತ ಬೇಟೆಯಲ್ಲಿ ತೊಡಗಿದ್ದಾರೆ. ನಗರದಲ್ಲಿ ಇಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಶಿವರಾಜ್ ಸಿಂಗ್ ಚವ್ಹಾಣ್ ರೋಡ್ ಶೋ ನಡೆಸಿ ಪಕ್ಷದ ಅಭ್ಯರ್ಥಿ ಪರ ಮತಯಾಚನೆ ಮಾಡಿದರು.
ನಗರದ ಸರಾಫ್ ಬಜಾರ್ನ ಗಣೇಶ ದೇವಸ್ಥಾನದಿಂದ ಆರಂಭಗೊಂಡ ರೋಡ್ ಶೋ ಗಂಜ್ ಪ್ರದೇಶ, ಕಿರಾಣಿ ಬಜಾರ್ ಮಾರ್ಗವಾಗಿ ಸುಪರ್ ಮಾರ್ಕೆಟ್‍ವರೆಗೂ ನಡೆಯಿತು. ದಾರಿಯುದ್ದಕ್ಕೂ ಹೂವುಗಳನ್ನು ಹಾಕುವ ಮೂಲಕ ಬಿಜೆಪಿ ಕಾರ್ಯಕರ್ತರು ಅವರನ್ನು ಸ್ವಾಗತಿಸಿದರು. ಈ ವೇಳೆ ಜನರತ್ತ ಕೈ ಬೀಸಿದ ಶಿವರಾಜ್ ಸಿಂಗ್ ಚವ್ಹಾಣ್, ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್‍ಗೆ ಮತ ಹಾಕುವಂತೆ ಮತದಾರರಲ್ಲಿ ಮನವಿ ಮಾಡಿದರು.
ನಂತರ ಮಾತನಾಡಿದ ಚವ್ಹಾಣ್, ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಹಾಗೂ ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಮಾಜಿ ಪ್ರಧಾನಿ ದೇವೇಗೌಡರದ್ದು ಕೇವಲ ಅಪ್ಪ-ಮಕ್ಕಳ ಪಕ್ಷ ಎಂದು ತಿಳಿದುಕೊಂಡಿದ್ದೆವು. ಆದರೆ ಈಗ ಅಪ್ಪ, ಮಕ್ಕಳು, ಮೊಮ್ಮಕ್ಕಳು ಮತ್ತು ಸೊಸೆಯಂದಿರ ಪಕ್ಷವಾಗಿದೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ತಾವೂ ನಿಂತಿದ್ದು, ಮೊಮ್ಮಕ್ಕಳನ್ನು ಕಣಕ್ಕಿಳಿಸಿದ್ದಾರೆ. ಸೊಸೆಯಂದಿರಿಗೂ ಯಾವುದಾದರೂ ಒಂದು ಕ್ಷೇತ್ರ ಕೊಡಬೇಕಿತ್ತು ಎಂದು ವ್ಯಂಗ್ಯವಾಡಿದರು.
ಇನ್ನು ರಾಜ್ಯದಲ್ಲಿರುವ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಾಜ್ಯದ ಅಭಿವೃದ್ಧಿ ಬಯಸುವ ಯಾವುದೇ ಕೆಲಸ ಮಾಡಿಲ್ಲ. ಅಭಿವೃದ್ಧಿ ಮರೀಚಿಕೆಯಾಗಿದೆ. ಕಲಬುರಗಿ ಲೋಕಸಭೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ, ಮತ್ತೊಮ್ಮೆ ಮೋದಿಯವರನ್ನು ಈ ದೇಶದ ಪ್ರಧಾನಿಯನ್ನಾಗಿ ಮಾಡಿ ಎಂದು ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್, ಶಾಸಕ ಬಸವರಾಜ್ ಮುತ್ತಿಮೂಡ್, ಶಶೀಲ್ ಜಿ. ನಮೋಶಿ, ಚಂದು ಪಾಟೀಲ, ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ ಸೇರಿದಂತೆ ಅನೇಕರು ಭಾಗವಹಿಸಿದ್ದರು.