ಕಲಬುರಗಿ :ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ನಿನ್ನೆ ರಾತ್ರಿಯಿಂದ ಎಡಬಿಡದೆ ಬಿರುಸಿನ ಮಳೆ ಸುರಿಯುತ್ತಿದ್ದು, ಮನೆಗಳಿಗೆ ಮಳೆಯ ನೀರು ನುಗ್ಗಿತ್ತಿದೆ. ಮುನ್ನೆಚ್ವರಿಕೆ ಕ್ರಮವಾಗಿ ಜಿಲ್ಲೆಯ ಮೂರು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕಲಬುರಗಿ ಜಿಲ್ಲೆಯ ಚಿತ್ತಾಪುರ, ಸೇಡಂ, ಹಾಗೂ ಚಿಂಚೋಳಿ ತಾಲೂಕಿನ ಶಾಲಾ ಕಾಲೇಜುಗಳಿಗೆ ತಾಲೂಕು ಆಡಳಿತದಿಂದ ಮಕ್ಕಳ ಹಿತದೃಷ್ಟಿಯಿಂದ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಇತರೆ ತಾಲೂಕುಗಳಲ್ಲಿಯೂ ಮಳೆಯ ಪ್ರಮಾಣವನ್ನು ನೋಡಿಕೊಂಡು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲು ತಾಲೂಕು ಆಡಳಿತಕ್ಕೆ ಕಲಬುರಗಿ ಡಿಸಿ ಬಿ. ಪೌಜಿಯಾ ತರನ್ನುಮ್ ಅವರು ಸೂಚನೆ ನೀಡಿದ್ದಾರೆ. ಮೂರು ತಾಲೂಕುಗಳಲ್ಲಿ ಆಯಾ ತಹಶೀಲ್ದಾರರು, ಬಿಇಓ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಸೇರಿಕೊಂಡು ಬಿರುಸಿನ ಮಳೆಯಾಗುವ ಸಾಧ್ಯತೆ ಇರುವ ಕಾರಣ ಒಂದು ದಿನ ಎಲ್ಲಾ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಮಳೆಯಿಂದಾಗಿ ನಗರದಲ್ಲಿ ರಸ್ತೆ, ತಗ್ಗು ಪ್ರದೇಶದಲ್ಲಿ ನೀರು ನಿಂತಿದೆ. ಜೆ.ಆರ್ ನಗರ, ಉದಯ ನಗರ, ಕೈಲಾಸ ನಗರ ಸೇರಿದಂತೆ ಹಲವೆಡೆ ಮನೆಗಳಿಗೆ ಮಳೆ ನೀರು ನುಗ್ಗಿದ್ದು ಜನ ಪರದಾಡುತ್ತಿದ್ದಾರೆ. ಲಾಲಗೇರಿ ಕ್ರಾಸ್, ಕೆಬಿಎನ್ ಆಸ್ಪತ್ರೆ ಮುಂಭಾಗದ ರಸ್ತೆಗಳು ಜಲಾವೃತಗೊಂಡಿವೆ. ಹಳೆ ಜೇವರ್ಗಿ ರಸ್ತೆಯ ಹಾಗೂ ಪಿಡಿಎ ಕಾಲೇಜು ಬಳಿಯ ರೈಲ್ವೆ ಅಂಡರ್‌ಪಾಸ್ ಗಳಲ್ಲಿ ಮಳೆ ನೀರು ನಿಂತು ಸಂಚಾರ ಸಂಪೂರ್ಣ ಬಂದ್ ಆಗಿದೆ. ಮತ್ತೊಂದು ಮಳೆ ಬೀಳುತ್ತಿರುವುದರಿಂದ ಜನ ಮನೆಯಿಂದ ಹೊರಬರಲು ಹಿಂದೇಟು ಹಾಕ್ತಿದ್ದು, ವಾಹನ ಸಂಚಾರ ಇಳಿಕೆಯಾಗಿ ರಸ್ತೆಗಳು ಖಾಲಿ ಖಾಲಿ ಕಂಡು ಬರುತ್ತಿವೆ.