ಕಲಬುರಗಿ:ಜಿಲ್ಲೆಯ ಆಳಂದ ಪಟ್ಟಣದ ಲಾಡ್ಲೇ ಮಶಾಕ್ ದರ್ಗಾದಲ್ಲಿನ ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಸಲ್ಲಿಸುವ ವಿಚಾರದಲ್ಲಿ ದರ್ಗಾ ಕಮಿಟಿಗೆ ಹೈಕೋರ್ಟ್ನಲ್ಲಿ ಹಿನ್ನಡೆ ಆಗಿದೆ. ದರ್ಗಾದಲ್ಲಿನ ಶಿವಲಿಂಗಕ್ಕೆ ಪೂಜೆ ಮಾಡಲು ವಕ್ಫ್ ಟ್ರಿಬುನಲ್ ಕೋರ್ಟ್ ನೀಡಿದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಈ ಸಂಬಂಧ ಟ್ರಿಬುನಲ್ ಕೋರ್ಟ್ ಆದೇಶವನ್ನು ಕಲಬುರಗಿ ಹೈಕೋರ್ಟ್ ಪೀಠ ಎತ್ತಿ ಹಿಡಿದಿದೆ.
ಮಹಾಶಿವರಾತ್ರಿಯಂದೇ ದರ್ಗಾದ ಉರುಸ್ ಇದ್ದು ಬೆಳಿಗ್ಗೆ 8 ಗಂಟೆಯಿಂದ 12 ಗಂಟೆವರೆಗೆ 15 ಜನ ಮುಸ್ಲಿಮರು ತೆರಳಿ ದರ್ಗಾಕ್ಕೆ ಪೂಜೆ ಸಲ್ಲಿಸಬೇಕು. ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆವರೆಗೆ 15 ಜನ ಹಿಂದೂಗಳು ತೆರಳಿ ಶಿವಲಿಂಗ ಪೂಜೆ ನೆರವೇರಿಸುವಂತೆ ಕಳೆದ ನಾಲ್ಕು ದಿನಗಳ ಹಿಂದೆ ಕಲಬುರಗಿ ವಕ್ಫ್ ಟ್ರಿಬುನಲ್ ಕೋರ್ಟ್ ಆದೇಶಿಸಿತ್ತು.
ಶಿವರಾತ್ರಿಗೆ ಕೇವಲ ಎರಡು ದಿನವಿರುವಾಗಲೇ ವಕ್ಫ್ ಟ್ರಿಬುನಲ್ ಕೋರ್ಟ್ ಆದೇಶ ಪ್ರಶ್ನಿಸಿ ಶ್ರೀ ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅವಕಾಶ ನೀಡಬಾರದೆಂದು ದರ್ಗಾ ಕಮಿಟಿಯಿಂದ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಜೆ.ಎಮ್.ಖಾಜಿ ನೇತೃತ್ವದ ಹೈಕೋರ್ಟ್ ಪೀಠ ವಕ್ಫ್ ಟ್ರಿಬುನಲ್ ಕೋರ್ಟ್ ಆದೇಶ ಪಾಲಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಅಲ್ಲದೆ ಆರು ಗಂಟೆ ನಂತರ ದರ್ಗಾಕ್ಕೆ ಯಾರೂ ಹೋಗಬಾರದು, ಜಿಲ್ಲಾಧಿಕಾರಿ ವಾರಕ್ಕೊಮ್ಮೆ ಅಲ್ಲಿ ಸ್ವಚ್ಚತೆ ಕಾರ್ಯಕ್ಕೆ ಓರ್ವರನ್ನು ನಿಯೋಜಿಸಬೇಕು ಎಂಬ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಹೈಕೋರ್ಟ್ ನೀಡಿರುವ ತೀರ್ಪಿನ ಪ್ರಕಾರ ನಾಳೆ ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆವರೆಗೆ ದರ್ಗಾದಲ್ಲಿನ ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಸಲ್ಲಿಸಲಾಗುತ್ತದೆ.