ಕಲಬುರಗಿ: ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ವಿಳಂಬ ಅನುಸರಿಸದೆ ಶೀಘ್ರದಲ್ಲೇ ಸಮೀಕ್ಷೆ ನಡೆಸಿ ಪರಿಹಾರ ಒದಗಿಸುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆಗ್ರಹಿಸಿದ್ದಾರೆ.
ಈಶ್ವರ್ ಖಂಡ್ರೆ, ಕೆಪಿಸಿಸಿ ಕಾರ್ಯಾಧ್ಯಕ್ಷ ಈ ಕುರಿತು ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದೆಂದೂ ಕಂಡರಿಯದಂತಹ ಭೀಕರ ಪ್ರವಾಹ ಬಂದೊದಗಿದೆ. ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಈ ಬಾರಿ ಹತ್ತಿ ಹೆಚ್ಚು ಹಾನಿಗೊಳಗಾಗಿದೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿರುವುದು ಸರಿಯಲ್ಲ ಎಂದರು.
ಎಕರೆಗೆ ಮೂರು, ನಾಲ್ಕು ಸಾವಿರ ಪರಿಹಾರ ಘೋಷಣೆ ಮಾಡಿದ್ರೆ ಸಾಲದು. ಇದರಿಂದ ರೈತರಿಗಾದ ನಷ್ಟ ತುಂಬಲು ಸಾಧ್ಯವಿಲ್ಲ. ಆದ್ದರಿಂದ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರದ ರಾಷ್ಟ್ರೀಯ ವಿಪತ್ತು ಅನುದಾನ ಹೊರತುಪಡಿಸಿ ರಾಜ್ಯ ಸರ್ಕಾರವೇ ಹೆಚ್ಚುವರಿಯಾಗಿ ಪ್ರತಿ ಎಕರೆಗೆ 50 ಸಾವಿರ ರೂಪಾಯಿ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು.
ಶಾಸಕರೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿ
ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಾಳೆ ವೈಮಾನಿಕ ಸಮೀಕ್ಷೆ ನಡೆಸಲು ಮುಂದಾಗಿದ್ದಾರೆ. ಈ ಬಾರಿಯ ಸಮೀಕ್ಷೆಯಾದರೂ ರೈತರಿಗೆ, ಪ್ರವಾಹ ಸಂತ್ರಸ್ತರಿಗೆ ಅನುಕೂಲವಾಗಲಿ. ಕೇವಲ ಅಧಿಕಾರಿಗಳೊಂದಿಗೆ ಸಭೆ ನಡೆಸಿದರೆ ಸಾಲದು, ಆಯಾ ತಾಲೂಕಿನ ಶಾಸಕರೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವ ಮೂಲಕ ವಾಸ್ತವವನ್ನು ಅರಿತುಕೊಂಡು ಪ್ರವಾಹ ಸಂತ್ರಸ್ತರಿಗೆ ನೆರವಾಗಬೇಕು ಎಂದರು.