ಕಲಬುರಗಿ : ಪಠ್ಯಪುಸ್ತಕ ಪರಿಷ್ಕರಣೆ ವಿವಾದದ ಕುರಿತಾದ ಪ್ರತಿಭಟನೆ ರಾಜ್ಯಾದ್ಯಂತ ನಡೆಯುತ್ತಿದೆ. ಪಠ್ಯದಲ್ಲಿರುವ ವಿಶ್ವಗುರು ಬಸವಣ್ಣನವರ ಕುರಿತಾದ ತಪ್ಪು ಮಾಹಿತಿಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ ನಗರದ ಜಗತ್ ವೃತ್ತದ ಬಳಿ ನಡೆಯಿತು.
ಜಾಗತಿಕ ಲಿಂಗಾಯತ ಮಹಾಸಭಾ ವತಿಯಿಂದ ನಗರದ ಜಗತ್ ವೃತ್ತದಲ್ಲಿ ಬೃಹತ್ ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು. 9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಬಸವಣ್ಣನವರ ಕುರಿತಾದ ಪಾಠದಲ್ಲಿ ತಪ್ಪು ಮಾಹಿತಿ ಮುದ್ರಿಸಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಕಲಬುರಗಿಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದಿಂದ ಸರ್ಕಾರದ ವಿರುದ್ಧ ಪ್ರತಿಭಟನೆ.. ಇದೇ ವೇಳೆ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷರಾಗಿರುವ ರೋಹಿತ್ ಚಕ್ರತೀರ್ಥ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ರೋಹಿತ್ ಚಕ್ರತೀರ್ಥ ಅವರ ಪ್ರತಿಕೃತಿ ದಹಿಸಲು ಮುಂದಾದಾಗ ಪೊಲೀಸರು ತಡೆದಿದ್ದು, ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು.
ಬಳಿಕ ಜಗತ್ ವೃತ್ತದಿಂದ ಡಿಸಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಜಾಗತಿಕ ಲಿಂಗಾಯತ ಮಹಾಸಭಾದ ಮುಖಂಡರು, ಬಸವಣ್ಣನವರ ಕುರಿತಾಗಿ ಪಠ್ಯದಲ್ಲಿ ಅನೇಕ ತಪ್ಪು ಮಾಹಿತಿಗಳನ್ನು ಸರಿಪಡಿಸಿ ಬಳಿಕ ಹೊಸ ಪಠ್ಯಪುಸ್ತಕ ನೀಡುವಂತೆ ಆಗ್ರಹಿಸಿ ಡಿಸಿ ಮೂಲಕ ಮನವಿ ಸಲ್ಲಿಸಿದರು.
ಓದಿ :ಸುಳ್ಯದ ಹಿಂದೂ ಕಾರ್ಯಕರ್ತನ ಕೊಲೆ ಪ್ರಕರಣದ ಆರೋಪಿ ಬರ್ಬರ ಹತ್ಯೆ