ಕಲಬುರಗಿ: ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಕಲಬುರಗಿಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮ, ಸಡಗರ ಕಳೆಗಟ್ಟಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸುತ್ತಿರುವ ಹಿನ್ನೆಲೆ ನಗರದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ 7 ಜಿಲ್ಲೆಗಳು ಹೈದರಾಬಾದ್ ನಿಜಾಮರ ಆಳ್ವಿಕೆಯಿಂದ ಸ್ವಾತಂತ್ರ್ಯಗೊಂಡು ಸೆಪ್ಟೆಂಬರ್ 17ಕ್ಕೆ 75ವರ್ಷಗಳಾಗುತ್ತಿದ್ದು, ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸಲಾಗುತ್ತಿದೆ. ಕಲ್ಯಾಣ ಕರ್ನಾಟಕ ಸ್ವಾತಂತ್ರ್ಯದ ಸಂಭ್ರಮ ಅಮೃತ ಮಹೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ.
ಇಂದು ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶೇಷ ವಿಮಾನದ ಮೂಲಕ ಕಲಬುರಗಿಗೆ ಆಗಮಿಸಿ, ಬೆಳಗ್ಗೆ 8:45ಕ್ಕೆ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ಥಳಿಗೆ ಮಾಲಾರ್ಪಣೆ ಮಾಡಲಿದ್ದಾರೆ. ನಂತರ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕದ ಸ್ವಾತಂತ್ರ್ಯ ದಿವಸ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೇರವೇರಿಸಲಿದ್ದಾರೆ. ಬಳಿಕ ನಗರದ ನೂತನ ವಿದ್ಯಾಲಯ (ಎನ್ ವಿ) ಮೈದಾನದಲ್ಲಿ ಹಮ್ಮಿಕೊಂಡಿರುವ ಕ.ಕ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಾರೆ.