ಕಲಬುರಗಿ:ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಳ ಕುರಿತಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರದಲ್ಲಿ ಅಧಿಸೂಚನೆ ಪ್ರಕಟವಾಗುವ ನಿರೀಕ್ಷೆಯಿದೆ ಎಂದು ಜಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
ಜಿಲ್ಲೆಯ ಅಫಜಲಪುರ ತಾಲೂಕಿನ ಸೊನ್ನ ಬ್ಯಾರೇಜ್ಗೆ ಭೇಟಿ ನೀಡಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹದಾಯಿ ಯೋಜನೆ ಕುರಿತಂತೆ 800 ಕೋಟಿ ರೂ. ಮೊತ್ತದ ವಿಸ್ತೃತ ಯೋಜನಾ ವರದಿ ಸಹ ಕಳುಹಿಸಲಾಗಿದೆ. ಕೊರೊನಾ ಹಾವಳಿ ಕಡಿಮೆಯಾದ ನಂತರ ದೆಹಲಿಗೆ ಹೋಗಿ ಕೇಂದ್ರ ಜಲಸಂಪನ್ಮೂಲ ಸಚಿವರನ್ನು ಭೇಟಿಯಾಗಿ ಇದರ ಅನುಮೋದನೆ ಪಡೆಯಲಾಗುವುದು ಎಂದರು.
ಬ್ಯಾರೇಜ್ಗೆ ಭೇಟಿ ನೀಡಿದ ಸಚಿವ ರಮೇಶ್ ಜಾರಕಿಹೊಳಿ ನೀರಾವರಿ ಯೋಜನೆಗಳ ಸಮಗ್ರ ಮಾಹಿತಿ ಪಡೆಯುತ್ತಿದ್ದೇನೆ. ಕಲಬುರಗಿ ವಲಯದ ಎಲ್ಲಾ ನೀರಾವರಿ ಯೋಜನೆಗಳನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುವುದು. ಮುಂದಿನ 3 ವರ್ಷಗಳಲ್ಲಿ ಅಣೆಕಟ್ಟು ನಿರ್ವಹಣೆ, ಏತ ನೀರಾವರಿ ಯೋಜನೆ ಅನುಷ್ಠಾನ ಮತ್ತು ನೀರಾವರಿ ಯೋಜನೆಗಳಿಗೆ ಅಧುನಿಕ ಸ್ಪರ್ಶ ನೀಡಲು ಹಾಗೂ ಮುಂದೆ ಹಾಕಿಕೊಳ್ಳಬೇಕಾದ ಯೋಜನೆಗಳ ಬಗ್ಗೆ ಚರ್ಚಿಸಲು ಜುಲೈ 15ರ ನಂತರ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದರು.
ಕುಡಿಯುವ ನೀರಿನ ಸಮಸ್ಯೆ ಕುರಿತು ಮಹಾರಾಷ್ಟ ಸಿಎಂ ಜೊತೆ ಚರ್ಚೆ:
ಅಂತರ್ ರಾಜ್ಯ ಕುಡಿಯುವ ನೀರಿನ ಸಮಸ್ಯೆಗಳನ್ನು ಬಗೆಹರಿಸಲು ಮುಂದಿನ ವಾರದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ಜಲಸಂಪನ್ಮೂಲ ಸಚಿವರೊಂದಿಗೆ ಸಭೆ ನಡೆಸಲಾಗುತ್ತಿದ್ದು, ಇನ್ನೂ ದಿನಾಂಕ ನಿಗದಿಯಾಗಿಲ್ಲ ಎಂದು ತಿಳಿಸಿದ್ದಾರೆ.