ಕಲಬುರಗಿ: ಇದೇ ನವೆಂಬರ್ 22 ರಂದು ಕಲಬುರಗಿ ವಿಮಾನ ನಿಲ್ದಾಣ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಶಾಸಕರು ಹಾಗೂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಂಸದ ಉಮೇಶ್ ಜಾಧವ್ ಈ ವಿಷಯ ತಿಳಿಸಿದರು. ಇನ್ನು ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಜಿಲ್ಲಾಡಳಿತ ಮತ್ತು ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಅಧಿಕಾರಿಗಳು ಸಾಂಘಿಕವಾಗಿ ಕಾರ್ಯನಿರ್ವಹಿಸುವಂತೆ ಕಲಬುರಗಿ ಲೋಕಸಭಾ ಸದಸ್ಯ ಡಾ.ಉಮೇಶ ಜಾಧವ ಅಧಿಕಾರಿಗಳಿಗೆ ಸೂಚಿಸಿದರು.
ಕಲಬುರಗಿ ವಿಮಾನ ನಿಲ್ದಾಣ ಉದ್ಘಾಟನೆ ಹಿನ್ನೆಲೆಯಲ್ಲಿ ಏರ್ಪೋರ್ಟ್ ಆವರಣದಲ್ಲಿ ಕಾರ್ಯಕ್ರಮ ನಡೆಯುತ್ತಿರುವುದರಿಂದ ಡಿಜಿಸಿಎ ನಿಯಮಾನುಸಾರ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಉದ್ಘಾಟನಾ ಕಾರ್ಯಕ್ರಮದ ವೇದಿಕೆ ಸೇರಿದಂತೆ ಕಾರ್ಯಕ್ರಮದ ಸಂಪೂರ್ಣ ನಿರ್ವಹಣೆ ಮಾಡಬೇಕು. ಈ ಭಾಗದಲ್ಲಿ ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿರುವುದರಿಂದ ಎಲ್ಲಾ ವಿಶ್ವವಿದ್ಯಾಲಯಗಳು, ಖಾಸಗಿ ವಿಶ್ವವಿದ್ಯಾಲಯಗಳು, ಉದ್ಯಮಿಗಳು, ಸಿಮೆಂಟ್ ಕಂಪನಿ ಉದ್ಯಮಿಗಳು, ಶಿಕ್ಷಣ-ಸಂಸ್ಥೆಗಳು, ಗ್ರಾಮ, ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಅಧ್ಯಕ್ಷರನ್ನು ಆಹ್ವಾನಿಸಬೇಕು ಎಂದರು.
ವಿಮಾನ ನಿಲ್ದಾಣ ಆವರಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಸುಮಾರು 5000 ಜನ ಸಂಖ್ಯೆಗೆ ಆಸನ ವ್ಯವಸ್ಥೆ ಮಾಡಬೇಕು. ಭದ್ರತಾ ದೃಷ್ಠಿಯಿಂದ ಗಣ್ಯರಿಗೆ, ಮಾಧ್ಯಮದವರಿಗೆ, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಪ್ರತ್ಯೇಕ ಪಾಸ್ ವಿತರಿಸಬೇಕು. ಎಲ್ಲೆಡೆ ಸ್ವಚ್ಛತೆ ಮತ್ತು ಸೌಂದರ್ಯೀಕರಣ ಕೈಗೊಳ್ಳಬೇಕು. ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯ ಕೈಗೊಳ್ಳಬೇಕು ಎಂದರು.