ಕಲಬುರಗಿ:ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಮತದಾನದ ದಿನ ಸಮೀಪಿಸುತ್ತಿದೆ. ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಅದರಲ್ಲೂ ಈ ಬಾರಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲೇಬೇಕೆಂದು ಬಿಜೆಪಿ ಪಣತೊಟ್ಟಿದೆ. ಪಕ್ಷದ ನಾಯಕರು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಮತ ಪ್ರಚಾರ ನಡೆಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಸಂಜೆ ಕಲ್ಯಾಣ ಕರ್ನಾಟಕದಲ್ಲಿ ತಮ್ಮ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿ ಮತ ಯಾಚಿಸಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತವರು ಜಿಲ್ಲೆ ಕಲಬುರಗಿಯಲ್ಲಿ ಮೋದಿ ರೋಡ್ ಶೋ ನಡೆಸಿದರು. ಕಲಬುರಗಿ ದಕ್ಷಿಣ ಮತ್ತು ಉತ್ತರ ಮತಕ್ಷೇತ್ರದ ಅಭ್ಯರ್ಥಿಗಳ ಪರವಾಗಿ ಅವರು ಮತ ಕೇಳಿದರು. ಇದಕ್ಕೂ ಮುನ್ನ ನಗರದ ಡಿಎಆರ್ ಹೆಲಿಪ್ಯಾಡ್‍ಗೆ ವಿಶೇಷ ವಿಮಾನದ ಮೂಲಕ ಆಗಮಿಸಿದ ಪ್ರಧಾನಿ ನೇರವಾಗಿ ನಗರದ ಹುಮನಾಬಾದ್ ರಿಂಗ್ ರಸ್ತೆ ಬಳಿ ಇರುವ ಕೆಎಂಎಫ್‌ಗೆ ತೆರಳಿದರು. ಅಲ್ಲಿ ಮುಖಂಡರು ಅದ್ದೂರಿ ಸ್ವಾಗತ ನೀಡಿದರು. ಅಲ್ಲಿಂದ ತೆರೆದ ವಾಹನದ ಮೂಲಕ ರೋಡ್ ಶೋ ಪ್ರಾರಂಭಗೊಂಡು ಗಂಜ್ ಪ್ರದೇಶ, ಸೂಪರ್ ಮಾರ್ಕೆಟ್, ಜಗತ್ ವೃತ್ತ, ಅನ್ನಪೂರ್ಣ ಕ್ರಾಸ್‌ನಿಂದ ಸರದಾರ ವಲ್ಲಭಭಾಯಿ ಪಟೇಲ್ ವೃತ್ತದವರೆಗೂ ಸಾಗಿ ಮತಬೇಟೆ ನಡೆಸಿದರು. ತೆರೆದ ವಾಹನದಲ್ಲಿ ಪ್ರಚಾರ ಕೈಗೊಂಡ ಮೋದಿಗೆ ಮಾರ್ಗದುದ್ದಕ್ಕೂ ನೆರೆದಿದ್ದ ಬಿಜೆಪಿ ಮುಖಂಡರು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಹೂಮಳೆಗೈದರು.
ಬಿಗಿ ಪೊಲೀಸ್ ಬಂದೋಬಸ್ತ್:ಪ್ರಧಾನಿ ಮೋದಿ ರೋಡ್ ಶೋ ಹಿನ್ನೆಲೆಯಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಹುಮನಾಬಾದ್ ರಿಂಗ್ ರಸ್ತೆ ಬಳಿ ಇರುವ ಕೆಎಂಎಫ್‌ನಿಂದ ಸರದಾರ ವಲ್ಲಭಭಾಯಿ ಪಟೇಲ್ ವೃತ್ತದವರೆಗೂ ಅಂಗಡಿಗಳನ್ನು ಬಂದ್ ಮಾಡಲಾಗಿತ್ತು. ಮಧ್ಯಾಹ್ನದಿಂದಲೇ ವಾಹನಗಳ ಸಂಚಾರವನ್ನೂ ನಿಷೇಧಿಸಲಾಗಿತ್ತು.