ಕಲಬುರಗಿ: ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತವರು ಜಿಲ್ಲೆಗೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು ರಾಜಕೀಯ ರಂಗದಲ್ಲಿ ಸಂಚಲನ ಮೂಡಿಸಿದೆ. ಒಂದೇ ತಿಂಗಳಿನಲ್ಲಿ ಎರಡನೇ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿರುವ 'ನಮೋ' ಸ್ವಾಗತಕ್ಕೆ ರಾಜ್ಯ ಬಿಜೆಪಿ ಸಕಲ ತಯಾರಿ ಮಾಡಿಕೊಂಡಿದೆ. ಕಾಗಿಣಾ ನದಿ ತೀರದಲ್ಲಿರುವ ರಾಷ್ಟ್ರಕೂಟರ ರಾಜಧಾನಿ ಮಳಖೇಡ್ ಹಾಗೂ ಯಾದಗಿರಿ ಜಿಲ್ಲೆಯ ಕೊಡೆಕಲ್ ಗ್ರಾಮಗಳು ಮೋದಿ ಸ್ವಾಗತಕ್ಕೆ ಶೃಂಗಾರಗೊಂಡಿವೆ.
ಕಲ್ಯಾಣ ಕರ್ನಾಟಕದ ಬೀದರ್, ಯಾದಗಿರಿ, ಕಲಬುರಗಿ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಯ 51 ಸಾವಿರ ತಾಂಡಾ, ಹಟ್ಟಿ ನಿವಾಸಿಗಳಿಗೆ ಅನುಕೂಲವಾಗಲೆಂದು ಹೊಸದಾಗಿ ಕಂದಾಯ ಗ್ರಾಮವೆಂದು ಘೋಷಿಸಿ ಹಕ್ಕು ಪತ್ರ ನೀಡುವ ಮೂಲಕ ಅವರನ್ನು ಮುಖ್ಯವಾಹಿನಿಗೆ ತರಲು ಮೋದಿ ಮುನ್ನುಡಿ ಬರೆಯಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಭಾಗದಲ್ಲಿಯೇ ಬೃಹತ್ ಕಾರ್ಯಕ್ರಮ ನಡೆಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಕಟ್ಟಿಹಾಕಲು ಬಿಜೆಪಿ ಯೋಜನೆ ರೂಪಿಸಿದೆ. ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ನಿರೀಕ್ಷೆಗಳು ಗರಿಗೆದರಿವೆ. ಬೃಹತ್ ಮಟ್ಟದ ಈ ಕಾರ್ಯಕ್ರಮಗಳು ಮುಂಬರುವ ಚುನಾವಣೆಗೆ ರಣಕಹಳೆ ಮೊಳಗಿಸಲಿವೆ ಎಂದು ವಿಶ್ಲೇಷಿಸಲಾಗುತ್ತಿದೆ.
ಇಂದು ಬೆಳಗ್ಗೆ 11 ಗಂಟೆಗೆ ವಿಶೇಷ ವಿಮಾನದ ಮೂಲಕ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ಮೋದಿ, ಮೊದಲು ಯಾದಗಿರಿ ಜಿಲ್ಲೆಯ ಕೊಡೆಕಲ್ಗೆ ತೆರಳಿ ನಾರಾಯಣಪುರ ಎಡದಂಡೆ ನಾಲೆ ನವೀಕರಣ, ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ಚೆನ್ನೈ-ಸೂರತ್ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸುವರು. ತದನಂತರ ಮಧ್ಯಾಹ್ನ 2 ಗಂಟೆಗೆ ಸೇಡಂ ಜಿಲ್ಲೆಯ ಮಳಖೇಡಗೆ ಆಗಮಿಸಿ, ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿ ಪರಿವರ್ತನೆ ಮಾಡಿದ 51 ಸಾವಿರ ಜನರಿಗೆ ಹಕ್ಕು ಪತ್ರ ವಿತರಣೆ ಮಾಡಲಿದ್ದಾರೆ.
ಸಾಂಪ್ರದಾಯಿಕ ಉಡುಗೆಯಲ್ಲಿ 50 ಸಾವಿರ ಲಂಬಾಣಿ ಮಹಿಳೆಯರು: ಪ್ರಧಾನಿ ನರೇಂದ್ರ ಮೋದಿ ಅವರನ್ನು 50 ಸಾವಿರ ಲಂಬಾಣಿ ಮಹಿಳೆಯರು ತಮ್ಮ ಸಾಂಪ್ರದಾಯಿಕ ಉಡುಗೆ ತೊಡುಗೆಗಳಲ್ಲಿ ತಮ್ಮ ಕಲಾ ತಂಡಗಳಿಂದ ಸ್ವಾಗತಿಸಲಿದ್ದಾರೆ ಎಂದು ತಿಳಿದುಬಂದಿದೆ. ಕಾರ್ಯಕ್ರಮಕ್ಕೆ ಒಂದು ಲಕ್ಷ ಯುವಕರು ಬೈಕ್ ರ‍್ಯಾಲಿ ಮೂಲಕ ಆಗಮಿಸಲಿದ್ದಾರೆ ಎಂದು ಸೇಡಂ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಜೊತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಂದಾಯ ಸಚಿವ ಆರ್.ಅಶೋಕ್ ಸೇರಿದಂತೆ 18 ಜನ ಗಣ್ಯರು ಪ್ರಧಾನಿ ನರೇಂದ್ರ ಮೋದಿ ಜೊತೆಗೆ ವೇದಿಕೆ ಹಂಚಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ಮಳಖೇಡ್ ಹೊರವಲಯದಲ್ಲಿ 60 ಎಕರೆ ಜಮೀನಿನಲ್ಲಿ ಮುಖ್ಯ ವೇದಿಕೆ ನಿರ್ಮಾಣ ಮಾಡಲಾಗಿದೆ. ಜರ್ಮನ್ ಮಾದರಿಯ ಟೆಂಟ್ ಹಾಕಲಾಗಿದೆ. ಐದು ಕಡೆ ವಾಹನಗಳ ಪಾರ್ಕಿಂಗ್ಗೆ ವ್ಯವಸ್ಥೆ ಮಾಡಲಾಗಿದೆ. ಸುಮಾರು 3 ಲಕ್ಷ ಜನರು ಸೇರುವ ನಿರೀಕ್ಷೆ ಹೊಂದಲಾಗಿದೆ. ಹೆದ್ದಾರಿಯ ರಸ್ತೆ ಬದಲಾವಣೆ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಬರುವ ಜನರಿಗೆ ಊಟದ ವ್ಯವಸ್ಥೆಗಾಗಿ 200 ಕೌಂಟರ್ ಸ್ಥಾಪಿಸಲಾಗಿದೆ. 600 ಬಾಣಸಿಗರು ಇರಲಿದ್ದಾರೆ. ವಿವಿಧ ಸ್ಥಳಗಳಿಂದ ಫಲಾನುಭವಿಗಳನ್ನು ಊಚಿತವಾಗಿ ಕರೆತರಲು 2,500 ಸಾರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ. 10 ಸಾವಿರ ನಾಲ್ಕು ಚಕ್ರದ ವಾಹನಗಳ ನಿಯೋಜನೆ ಮಾಡಲಾಗಿದೆ. ಪ್ರತಿ ಬಸ್‍ಗೆ ಮತ್ತು ಫಲಾನುಭವಿಗಳನ್ನು ನೋಡಿಕೊಳ್ಳಲು ಗ್ರಾಮ ಲೆಕ್ಕಿಗರನ್ನು ನಿಯೋಜಿಸಲಾಗಿದೆ.