ಕಲಬುರಗಿ:ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯಲ್ಲಿ ಇಂದು 'ಪಿಎಂ ಆವಾಸ್ ಯೋಜನೆ'ಯಡಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯಿಂದ ಭಾರತೀಯ ವಾಯುಪಡೆ ವಿಶೇಷ ವಿಮಾನದ ಮೂಲಕ ಬೆಳಿಗ್ಗೆ 9.30ಕ್ಕೆ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಬಂದಿಳಿದರು.
ಕೇಂದ್ರ ಸಚಿವ ಭಗವಂತ ಖೂಬಾ, ಸಚಿವ ಡಾ.ಶರಣಪ್ರಕಾಶ ಪಾಟೀಲ, ಸಂಸದ ಡಾ.ಉಮೇಶ ಜಾಧವ್, ಶಾಸಕ ಬಸವರಾಜ ಮತ್ತಿಮಡು, ವಿಧಾನ ಪರಿಷತ್ ಶಾಸಕರಾದ ಬಿ.ಜಿ.ಪಾಟೀಲ, ಶಶೀಲ ಜಿ.ನಮೋಶಿ, ಕಲಬುರಗಿ ಮಹಾನಗರ ಪಾಲಿಕೆಯ ಮಹಾಪೌರ ವಿಶಾಲ ಧರ್ಗಿ ಸೇರಿದಂತೆ ಇತರೆ ನಾಯಕರು, ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಆರ್.ಚೇತನ ಕುಮಾರ, ಎಸ್.ಪಿ.ಅಡ್ಡೂರು ಶ್ರೀನಿವಾಸಲು ಪ್ರಧಾನಿಗೆ ಹೂಗುಚ್ಚ ನೀಡಿ ಬರಮಾಡಿಕೊಂಡರು.
ನಂತರ ಪ್ರಧಾನಿ ವಾಯುಪಡೆ ಹೆಲಿಕಾಪ್ಟರ್ ಮೂಲಕ ಸೋಲಾಪುರಕ್ಕೆ ಪ್ರಯಾಣಿಸಿದರು. ಈ ಕಾರ್ಯಕ್ರಮದ ನಂತರ ಮಧ್ಯಾಹ್ನ 1 ಗಂಟೆಗೆ ಸೇನಾ ಹೆಲಿಕಾಪ್ಟರ್ ಮೂಲಕ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
ಮಧ್ಯಾಹ್ನ 2.10ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಮೋದಿ, ಅಲ್ಲಿಂದ ನೇರವಾಗಿ ದೇವನಹಳ್ಳಿಯ ಬಿ.ಮಾರೇನಹಳ್ಳಿಯಲ್ಲಿರುವ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ (ಬಿಐಇಟಿಸಿ) ಸೆಂಟರ್ನಲ್ಲಿ ಆಯೋಜಿಸಿರುವ ಕಾರ್ಯಕ್ರಮ ಸ್ಥಳಕ್ಕೆ ತೆರಳುವರು. ಇಲ್ಲಿ ಅವರು ಬಿಐಇಟಿಸಿ ಅನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 2.45ರಿಂದ 3.45ರವರೆಗೆ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, 3.55ಕ್ಕೆ ಚೆನ್ನೈಗೆ ಪ್ರಯಾಣಿಸಲಿದ್ದಾರೆ.
ಇದನ್ನೂ ಓದಿ:ದೇವನಹಳ್ಳಿಯಲ್ಲಿ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಸೆಂಟರ್: ನಾಳೆ ಪ್ರಧಾನಿಯಿಂದ ಉದ್ಘಾಟನೆ