ಕಲಬುರಗಿ: ನಾಳೆ (ಸೆ.17) ರಂದು ಕಲ್ಯಾಣ ಕರ್ನಾಟಕ ಉತ್ಸವವನ್ನು ಆಚರಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಉತ್ಸವದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭಾಗಿಯಾಗಲಿದ್ದಾರೆ
ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮ ಕಲಬುರಗಿ ನಗರದ ಡಿಎಆರ್ ಮೈದಾನದಲ್ಲಿ ನಡೆಯಲಿದೆ, ಉತ್ಸವಕ್ಕೆ ಆಗಮಿಸುವ ಸಿಎಂ ಯಡಿಯೂರಪ್ಪ ನಾಳೆ ಬೆಳಿಗ್ಗೆ ಎಸ್ವಿಪಿ ವೃತ್ತದಲ್ಲಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ರ ಪುತ್ಥಳಿಗೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಲಿದ್ದಾರೆ. ನಂತರ ಡಿಎಆರ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ.
ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಭಾರಿ ಸಿದ್ದತೆ 2013 ರಿಂದ 2019-20ರ ವರೆಗೆ ಕೆಕೆಆರ್ಡಿಬಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ವಿಶೇಷ ಕೈಪಿಡಿಯನ್ನು ಸಿಎಂ ಬಿಡುಗಡೆ ಮಾಡಲಿದ್ದಾರೆ. ಇದೇ ವೇಳೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೂ ಸಹ ಶಂಕುಸ್ಥಾಪನೆ ಮಾಡಲಿದ್ದಾರೆ. ಕಲ್ಯಾಣ ಕರ್ನಾಟಕದ ಉತ್ಸವವನ್ನು ಈ ಭಾಗದ ಜನ ಕಣ್ತುಂಬಿಕೊಳ್ಳಲು ನೇರ ಪ್ರಸಾರದ ವ್ಯವಸ್ಥೆ ಮಾಡಲಾಗಿದೆ. ಉತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸೇರಿದಂತೆ ಹಲವು ಸಚಿವರು ಭಾಗವಹಿಸುವ ಸಾಧ್ಯತೆ ಇದೆ. ಉತ್ಸವದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಜರುಗದಂತೆ ಭದ್ರತೆಗಾಗಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
ನಿಜಾಮನ ದುರಾಡಳಿತ, ಪ್ರಜೆಗಳ ಮೇಲಿನ ಹಿಂಸೆಯನ್ನು ಗಂಭೀರವಾಗಿ ಪರಿಗಣಿಸಿದ ಅಂದಿನ ಗೃಹಮಂತ್ರಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ದಿಟ್ಟ ನಿರ್ಧಾರ ತೆಗೆದುಕೊಂಡು ಆಪರೇಟರ್ ಪೊಲೊ ಮೂಲಕ ನಿಜಾಮನ ದುರಾಡಳಿತ ದಮನ ಮಾಡಿ ಈ ಭಾಗದ ಜನರಿಗೆ ಸೆಪ್ಟೆಂಬರ್ 17 ರಂದು ಸ್ವಾತಂತ್ರ್ಯ ತಂದು ಕೊಟ್ಟರು. ನಿಜಾಮನಿಂದ ಸ್ವಾತಂತ್ರ್ಯ ಪಡೆಯಲು ಈ ಭಾಗದ ಸಹಸ್ರಾರು ಸ್ವಾತಂತ್ರ್ಯ ಹೋರಾಟಗಾರರ ಪ್ರಾಣ ಬಲಿದಾನ ಫಲವಾಗಿ ಕಲ್ಯಾಣ ಕರ್ನಾಟಕಕ್ಕೆ ಸ್ವಾತಂತ್ರ್ಯ ಲಭಿಸಿದೆ.