ಕಲಬುರಗಿ: ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಅನುದಾನಕ್ಕಾಗಿ ಆಗ್ರಹಿಸಿ ಕಲ್ಯಾಣ ಕರ್ನಾಟಕ ಭಾಗದ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ನೇತೃತ್ವದಲ್ಲಿ ತಟ್ಟೆ ಹಿಡಿದು ಭಿಕ್ಷಾಟನೆ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.
ನಗರದ ಕನ್ನಡ ಭವನದಿಂದ ಕೆಕೆಆರ್ಡಿಬಿ ಕಚೇರಿವರಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ನೂರಾರು ಮಂದಿ ಶಿಕ್ಷಕರು, ರಾಜ್ಯ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ 1995ರಿಂದ 2015ರವರೆಗಿನ ಎಲ್ಲಾ ಶಾಲೆಗಳನ್ನು ವೇತನಾನುದಾನಕ್ಕೆ ಒಳಪಡಿಸಬೇಕು ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ 371ಜೆ ಅಡಿಯಲ್ಲಿ ಮೂಲಭೂತ ಸೌಕರ್ಯ ಒದಗಿಸುವುದು, ಕೇಂದ್ರ ಸರ್ಕಾರ ಬಜೆಟ್ನಲ್ಲಿ ಘೋಷಿಸಿದಂತೆ 100 ಸೈನಿಕ ಶಾಲೆಗಳ ಪೈಕಿ ಒಂದು ಸೈನಿಕ ಶಾಲೆಯನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡುವಂತೆ ಪ್ರತಿಭಟನಾನಿರತ ಶಿಕ್ಷಕರು ಒತ್ತಾಯಿಸಿದರು.