ಕಲಬುರಗಿ:ಪ್ರೀತಿಸಿ, ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪ ಎದುರಿಸುತ್ತಿರುವ ರವಿ ಪೂಜಾರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಕ್ರೈಸ್ತ ಸಮುದಾಯದ ಹಾಗೂ ಕಲ್ಯಾಣ ಕರ್ನಾಟಕ ಸಂಘಟನೆಯ ನೇತೃತ್ವದಲ್ಲಿ ಪ್ರತ್ಯೇಕವಾಗಿ ಪ್ರತಿಭಟಿಸಲಾಯಿತು.
ಗರ್ಭಪಾತದ ವೇಳೆ ಸಾವಿಗೀಡಾದ ಪ್ರಿಯತಮೆ, ಆರೋಪಿಗೆ ಗಲ್ಲು ಶಿಕ್ಷೆಗೆ ಆಗ್ರಹಿಸಿ ಪ್ರತಿಭಟನೆ - ಶಿಕ್ಷೆಗೆ ಆಗ್ರಹಿಸಿ ಪ್ರತಿಭಟನೆ
ವಿದ್ಯಾರ್ಥಿನಿಯನ್ನು ಪ್ರೀತಿಸಿ, ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪ ಎದುರಿಸುತ್ತಿರುವ ರವಿ ಪೂಜಾರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಲಾಯ್ತು.
ಮೃತ ವಿದ್ಯಾರ್ಥಿನಿಯ ಪೋಷಕರು ಹಾಗೂ ಕ್ರೈಸ್ತ ಸಮುದಾಯದ ಮುಖಂಡರು ಕಲಬುರ್ಗಿಯ ಕಮಿಷನರ್ ಕಚೇರಿ ಎದುರು ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ್ರು. ವಿದ್ಯಾರ್ಥಿನಿಯನ್ನು ನಂಬಿಸಿ ಗರ್ಭಿಣಿಯನ್ನಾಗಿಸಿ,ನಂತರ ಗರ್ಭಪಾತ ಮಾಡಿಸಲು ಹೋದಾಗ ಆಕೆ ಮೃತಪಟ್ಟಿದ್ದಳು. ಈ ವಿಷಯವನ್ನು ಮುಚ್ಚಿಟ್ಟು, ವಿದ್ಯಾರ್ಥಿನಿ ಶವವನ್ನು ಕಾರಿನಲ್ಲಿ ಹಾಕಿಕೊಂಡು ತೆಲಂಗಾಣದ ಪರಗಿ ಬಳಿ ಪೆಟ್ರೋಲ್ ಸುರಿದು ಸುಟ್ಟು ಹಾಕಲಾಗಿತ್ತು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಬ್ರಹ್ಮಪುರ ಪೊಲೀಸರು ಆರೋಪಿ ರವಿ ಪೂಜಾರಿಯನ್ನು ಬಂಧಿಸಿದ್ದಾರೆ. ಆರೋಪಿಗೆ ಸಹಕರಿಸಿದ ಆತನ ಗೆಳೆಯ ಹಾಗೂ ಗರ್ಭಪಾತ ಕೊಂದು ಹಾಕಿರುವ ವೈದ್ಯರು ಮತ್ತು ಸಿಬ್ಬಂದಿಯನ್ನೂ ಬಂಧಿಸಬೇಕೆಂದು ಒತ್ತಾಯಿಸಿ ಇಂದು ಪ್ರತಿಭಟನೆ ನಡೆಸಲಾಯಿತು.
ಗರ್ಭಪಾತದ ನೆಪದಲ್ಲಿ ಕೊಲೆ ಮಾಡಿ ಸುಟ್ಟು ಹಾಕಿದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು. ಮನವಿ ಸ್ವೀಕರಿಸಿದ ಡಿಸಿಪಿ ಕಿಶೋರ್ ಬಾಬು, ಈಗಾಗಲೇ ಯುವಕನನ್ನು ಬಂಧಿಸಲಾಗಿದೆ. ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ, ಯುವತಿಯ ಕುಟುಂಬದ ಸದಸ್ಯರು ಮತ್ತಿತರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಇನೊಂದೆಡೆ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ಎಂ.ಎಸ್ ಪಾಟೀಲ್ ನರಿಬೋಳ ನೇತೃತ್ವದಲ್ಲಿ ನಗರದ ಸರ್ದಾರ್ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು.ಆರೋಪಿ ರವಿ ಪೂಜಾರಿಗೆ ಕಠಿಣ ಶಿಕ್ಷೆಗೆ ಗುರಿಪಡಿಸುವುದರ ಜೊತೆಗೆ ಕೃತ್ಯಕ್ಕೆ ಸಾಥ್ ನೀಡಿದ ಉಳಿದ ಆರೋಪಿಗಳನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಭ್ರೂಣ ಹತ್ಯೆ ಹಾಗೂ ಕೊಲೆ ಪ್ರಕರಣ ದಾಖಲಿಸಿ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದರು.