ಕಲಬುರಗಿ: ಕೋವಿಡ್ ನಿಯಂತ್ರಣದ ಹೆಸರಲ್ಲಿ ರಾಜ್ಯ ಸರ್ಕಾರ ಲೂಟಿಗೆ ಇಳಿದಿದೆ ಎಂದು ಆರೋಪಿಸಿ ಎಸ್.ಡಿ.ಪಿ.ಐ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಸರ್ಕಾರದ ವಿರುದ್ಧ ಕಲಬುರಗಿಯಲ್ಲಿ ಎಸ್.ಡಿ.ಪಿ.ಐ ಪ್ರತಿಭಟನೆ - ಕಲಬುರಗಿಯಲ್ಲಿ ಪ್ರತಿಭಟನೆ
ಕೊರೊನಾ ನಿಯಂತ್ರಣದ ಹೆಸರಿನಲ್ಲಿ ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನರ್, ವೆಂಟಿಲೇಟರ್ಗಳನ್ನು ಖರೀದಿಸುವ ವೇಳೆ ಸರ್ಕಾರ ಹಗರಣ ನಡೆಸಿದೆ ಎಂದು ಆರೋಪಿಸಿ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ಎಸ್.ಡಿ.ಪಿ.ಐ. ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕೊರೊನಾ ನಿಯಂತ್ರಣದ ಹೆಸರಿನಲ್ಲಿ ಸರ್ಕಾರ ಮೂರು ಸಾವಿರ ಕೋಟಿ ರೂಪಾಯಿಗಳ ಹಗರಣ ನಡೆಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೊರೊನಾ ನಿರ್ವಹಣೆಗಾಗಿ ಇದೂವರೆಗೆ 3392 ಕೋಟಿ ರೂಪಾಯಿ ಖರ್ಚು ಮಾಡಿರುವುದಾಗಿ ಸರ್ಕಾರ ಹೇಳುತ್ತಿದೆ. ಆದರೆ ಯಾವುದಕ್ಕೆ ಎಷ್ಟು ಖರ್ಚು ಮಾಡಲಾಗಿದೆ ಎಂಬುದರ ಮಾಹಿತಿ ನೀಡಲು ಹಿಂದೇಟು ಹಾಕುತ್ತಿದೆ ಎಂದು ಕಿಡಿಕಾರಿದರು.
ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನರ್, ವೆಂಟಿಲೇಟರ್, ಆಹಾರ ಪ್ಯಾಕೇಟ್, ಪಿಪಿಇ ಕಿಟ್ ಖರೀದಿಯಲ್ಲಿ ಸರ್ಕಾರ ಸಂಪೂರ್ಣವಾಗಿ ಹಗರಣ ನಡೆಸಿದೆ. ಕೂಡಲೇ ಈ ಹಗರಣದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು, ಹಗರಣ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.