ಕಲಬುರಗಿ: ಲೋಕಸಭೆ ಚುನಾವಣೆ ಹಿನ್ನೆಲೆ ಜಿಲ್ಲೆಯಲ್ಲಿ ಪಕ್ಷಾಂತರ ಪರ್ವ ಜೋರಾಗಿ ನಡೆದಿದೆ. ಅದರಲ್ಲಿಯೂ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಈ ಪ್ರಕ್ರಿಯೆ ಬಿರುಸುಗೊಂಡಿದೆ.
ಕಲಬುರಗಿಯಲ್ಲಿ ಪಕ್ಷಾಂತರ ಪರ್ವ... ಕಮಲ ಬಿಟ್ಟು ಕೈ ಹಿಡಿಯಲು ಶಾಣಪ್ಪ ನಿರ್ಧಾರ - kannada news
ರಾಜ್ಯ ರಾಜಕಾರಣದಲ್ಲಿ ಪಕ್ಷಾಂತರ ಪರ್ವ ಜೋರಾಗಿ ನಡೆದಿದೆ. ಇತ್ತೀಚೆಗಷ್ಟೇ ಬಿಜೆಪಿ ತೊರೆದಿದ್ದ ಕೆ.ಬಿ. ಶಾಣಪ್ಪ ಕೈ ಹಿಡಿಯಲು ಮುಂದಾಗಿದ್ದಾರೆ.
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಉಮೇಶ್ ಜಾಧವ್ ಬಿಜೆಪಿ ಸೇರ್ಪಡೆಗೊಂಡ ನಂತರ ಎರಡೂ ಪಕ್ಷಗಳ ನಡುವೆ ಪಕ್ಷಾಂತರ ಜೋರಾಗಿದೆ. ಇತ್ತೀಚೆಗಷ್ಟೇ ಬಿಜೆಪಿ ತೊರೆದಿದ್ದ ಮಾಜಿ ಸಚಿವ, ರಾಜ್ಯಸಭಾ ಮಾಜಿ ಸದಸ್ಯ ಕೆ.ಬಿ. ಶಾಣಪ್ಪ ಕಾಂಗ್ರೆಸ್ ಸೇರಲು ತೀರ್ಮಾನಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಬಿಜೆಪಿಯ ಹಿರಿಯ ನಾಯಕರ ವರ್ತನೆಯಿಂದ ಬೇಸತ್ತು ಪಕ್ಷ ತೊರೆದಿದ್ದೆ. ಯಾವುದೇ ಪಕ್ಷ ಸೇರ್ಪಡೆಯಾಗಬಾರದೆಂದು ನಿರ್ಧರಿಸಿದ್ದೆ. ಆದರೆ ಬೆಂಬಲಿಗರು ಸಭೆ ನಡೆಸಿ, ಕಾಂಗ್ರೆಸ್ ಪಕ್ಷದ ಸೇರ್ಪಡೆಗೆ ಆಗ್ರಹಿಸಿದ್ದಾರೆ. ಅಲ್ಲದೆ ಕಾಂಗ್ರೆಸ್ ನಾಯಕರೂ ಸಹ ಪಕ್ಷಕ್ಕೆ ಬರುವಂತೆ ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ಶಾಣಪ್ಪ ತಿಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ನೂರಾರು ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರಲು ತೀರ್ಮಾನಿಸಿರುವುದಾಗಿ ಸ್ಪಷ್ಟಪಡಿಸಿದ್ದಾರೆ.