ಕಲಬುರಗಿ: ಬಿತ್ತನೆ ಬೀಜ ಪೂರೈಕೆ ವಿಳಂಬವಾಗಿದ್ದಕ್ಕೆ ಶಾಸಕ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಶಾಸಕ ಖರ್ಗೆ ಜಿಲ್ಲೆಯಲ್ಲಿ ಬಿತ್ತನೆ ಬೀಜದ ಕೊರತೆ ಸಂಭವಿಸಿದ್ದು, ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ತಾವು ಪತ್ರ ಬರೆದರೂ ಸರ್ಕಾರ ಯಾವ ಕ್ರಮ ಕೈಗೊಂಡಿಲ್ಲ ಎಂದು ಶಾಸಕರಾದ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.
ಜಿಲ್ಲೆಗೆ ಬೇಕಾಗುವ ಅಗತ್ಯ ಬಿತ್ತನೆ ಬೀಜ ಪೂರೈಸಲು ಕ್ರಮ ಕೈಗೊಳ್ಳುವಂತೆ ಮಾನ್ಯ ಉಪಮುಖ್ಯಮಂತ್ರಿಗಳಿಗೆ ಪತ್ರ ಬರೆದರೂ ಸಮರ್ಪಕ ಬಿತ್ತನೆ ಬೀಜ ಪೂರೈಕೆಯಾಗಿಲ್ಲ. ಹಾಗಾಗಿ ರೈತರು ರೈತ ಸಂಪರ್ಕ ಕೇಂದ್ರಗಳ ಮುಂದೆ ಉದ್ದನೆಯ ಸಾಲಿನಲ್ಲಿ ಕಾದು ಕುಳಿತುಕೊಳ್ಳವಂತಾಗಿದೆ. ಈ ಕುರಿತು ಚರ್ಚಿಸಲು ಸರ್ಕಾರ ಸಿದ್ಧವಿಲ್ಲ ಇದು ಬೇಜವಾಬ್ದಾರಿತನದ ಪರಮಾವಧಿ ಎಂದು ಕಟುವಾಗಿ ಟೀಕಿಸಿದ್ದಾರೆ.
ಈ ಹಿಂದೆ ಬಿಎಸ್ವೈ ಸರ್ಕಾರವಿದ್ದಾಗ ರೈತರ ಮೇಲೆ ನಡೆದ ಗೋಲಿಬಾರ್ ಘಟನೆಯನ್ನು ನೆನಪಿಸಿಕೊಂಡ ಶಾಸಕರು, ಬಿತ್ತನೆ ಬೀಜಕ್ಕಾಗಿ ಸರದಿ ಸಾಲಿನಲ್ಲಿ ನಿಂತಿದ್ದ ರೈತರೊಬ್ಬರಿಗೆ ಪೊಲೀಸ್ ಅಧಿಕಾರಿ ಹಲ್ಲೆ ಮಾಡಿದ್ದಾರೆ ಎಂದು ಹೇಳುವ ಮೂಲಕ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ ಎಂದು ಗುಡುಗಿದ್ರು.