ಕಲಬುರಗಿ:ಗಾಂಜಾ ದಂಧೆಕೋರರಿಂದ ಸಿಪಿಐ ಶ್ರೀಮಂತ ಇಲ್ಲಾಳ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣದ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ಪಡೆದಿದ್ದಾರೆ. ಅಗತ್ಯವಿದ್ದರೆ ಏರ್ ಲಿಫ್ಟ್ ಮೂಲಕ ಹೆಚ್ಚಿನ ಚಿಕಿತ್ಸೆಗೆ ಬೇರಡೆ ಕರೆದೊಯ್ಯಲು ತಯಾರಿ ಮಾಡಿಕೊಳ್ಳಲಾಗಿದೆ ಎಂದು ಕಲಬುರಗಿ ಎಸ್ಪಿ ಇಶಾ ಪಂತ್ ತಿಳಿಸಿದ್ದಾರೆ.
ಕಲಬುರಗಿ ಯುನೈಟೆಡ್ ಆಸ್ಪತ್ರೆಯಲ್ಲಿ ದಾಖಲಿಸಲಾದ ಸಿಪಿಐ ಶ್ರೀಮಂತ ಇಲ್ಲಾಳ ಅವರನ್ನು ಡಿಸಿ ಯಶವಂತ ಗುರುಕರ್, ಎಸ್ಪಿ ಇಶಾ ಪಂತ್, ಡಿಸಿಪಿ ಆಡೂರು ಶ್ರೀನಿವಾಸಲು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಎಸ್ಪಿ ಇಶಾ ಪಂತ್, ಇಲ್ಲಾಳ ಅವರ ಸ್ಥಿತಿ ಚಿಂತಾಜನಕವಾಗಿದೆ. ದೇಹದ ಹಲವೆಡೆ ಗಂಭೀರ ಗಾಯಗಳಾಗಿವೆ. ಸದ್ಯ ಅವರಿಗೆ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗೃಹ ಸಚಿವರು ಸಂಪರ್ಕದಲ್ಲಿದ್ದು, ಮಾಹಿತಿ ಪಡೆಯುತ್ತಿದ್ದಾರೆ. ಚಿಕಿತ್ಸೆಯ ಖರ್ಚು ವೆಚ್ಚ ಎಷ್ಟೇ ಬರಲಿ ಉತ್ತಮ ಚಿಕಿತ್ಸೆ ಕೊಡಿಸುವ ಬಗ್ಗೆ ಗಮನ ಹರಿಸುವಂತೆ ಸೂಚಿಸಿದ್ದಾರೆ. ಅಗತ್ಯವಿದ್ದರೆ ಏರ್ ಲಿಫ್ಟ್ ಗೂ ಕ್ರಮ ಕೈಗೊಳ್ಳಲು ಸಿದ್ಧರಿದ್ದೇವೆ ಎಂದು ಹೇಳಿದರು.
ಎಸ್ಪಿ ಇಶಾ ಪಂತ್ ಪ್ರತಿಕ್ರಿಯೆ.. ನಿನ್ನೆ ಸಂಜೆ ಸಿಪಿಐ ಇಲ್ಲಾಳ ಅವರ ನೇತೃತ್ವದಲ್ಲಿ 10 ಜನರ ತಂಡ ಅಕ್ರಮ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಗಡಿ ಭಾಗದ ತರೂರ ಗ್ರಾಮದ ಜಮೀನೊಂದರಲ್ಲಿ ಕಾರ್ಯಾಚರಣೆಗೆ ತೆರಳಿದ್ದರು. ಈ ವೇಳೆ ಸುಮಾರು 40 ಜನರ ದುಷ್ಕರ್ಮಿಗಳ ತಂಡ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ. ಈ ವೇಳೆ ಸಿಪಿಐ ಇಲ್ಲಾಳ ಅವರಿಗೆ ಗಂಭೀರ ಗಾಯಗಳಾಗಿವೆ.
ಇದನ್ನೂ ಓದಿ:ಪೊಲೀಸರ ಮೇಲೆ ಗಾಂಜಾ ದಂಧೆಕೋರರ ಅಟ್ಟಹಾಸ: ಕಲಬುರಗಿ ಸರ್ಕಲ್ ಇನ್ಸ್ಪೆಕ್ಟರ್ ಸ್ಥಿತಿ ಚಿಂತಾಜನಕ