ವಿರಾಜಪೇಟೆ (ಕೊಡಗು): ಜಿಲ್ಲೆಯಲ್ಲಿ ಮಳೆ ಆರ್ಭಟಿಸುತ್ತಿರುವ ಹಿನ್ನೆಲೆ, ಕಳೆದ ಬಾರಿ ಕಾವೇರಿ ಉಕ್ಕಿ ಹರಿದಿದ್ದ ವಿರಾಜಪೇಟೆ ತಾಲೂಕಿನ ಬೇತ್ರಿ ಮೇಲ್ಸೇತುವೆಗೆ ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೇತ್ರಿ ಮೇಲ್ಸೇತುವೆಗೆ ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್ ಭೇಟಿ, ಪರಿಶೀಲನೆ
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೇತ್ರಿ ಮೇಲ್ಸೇತುವೆಗೆ ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ಹವಾಮಾನ ಇಲಾಖೆ ಆಗಸ್ಟ್ 7 ರವರೆಗೆ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ. ಈಗಾಗಲೇ ಕೆಲವು ತಗ್ಗು ಪ್ರದೇಶಗಳಲ್ಲಿ ನೀರು ಹರಿಯುತ್ತಿದೆ. ಮರಗಳು, ಚಿಕ್ಕಪುಟ್ಟ ಭೂ ಕುಸಿತಗಳು ಸಂಭವಿಸಿದ್ದು, ಸಂಬಂಧಪಟ್ಟ ಇಲಾಖೆಯವರು ಅದನ್ನು ತೆರವುಗೊಳಿಸಿ ಸಂಚಾರಕ್ಕೆ ಮುಕ್ತ ಮಾಡಿಕೊಟ್ಟಿದ್ದಾರೆ. ಕೊರೊನಾದಂತಹ ಸಂದಿಗ್ಧ ಪರಿಸ್ಥಿತಿಯಲ್ಲೂ ಜಿಲ್ಲಾಡಳಿತದ ವತಿಯಿಂದ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
ವಿಪತ್ತು ನಿರ್ವಹಣಾ ಅಧಿಕಾರಿಗಳ ತಂಡ ಹಾಗೂ ಸಿಬ್ಬಂದಿ ಪ್ರಾಕೃತಿಕ ವಿಕೋಪವನ್ನು ಸಮರ್ಥವಾಗಿ ಎದುರಿಸಲು ಸನ್ನದ್ಧರಾಗಿದ್ದಾರೆ. ಮುಂಜಾಗ್ರತಾ ದೃಷ್ಟಿಯಿಂದ ನದಿ ಪಾತ್ರದ ನಿವಾಸಿಗಳ ರಕ್ಷಣೆಗೆ ನಿರಾಶ್ರಿತರ ಕೇಂದ್ರಗಳನ್ನು ತೆರೆಯಲಾಗಿದೆ. ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಆಗುತ್ತಿರುವುದರಿಂದ ಜನತೆ ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿದ್ದಾರೆ.