ಕೊಡಗು: ಅರಣ್ಯ ಸಿಬ್ಬಂದಿಯೊಬ್ಬರನ್ನು ಬಲಿ ಪಡೆದಿದ್ದ ಕಾಡಾನೆಯನ್ನು ಕೊನೆಗೂ ಅರಣ್ಯ ಇಲಾಖೆ ಸಿಬ್ಬಂದಿ ಮಡಿಕೇರಿ ಬಳಿಯ ಕೆದಕಲ್ನಲ್ಲಿ ಸೆರೆ ಹಿಡಿದಿದ್ದಾರೆ. ಈ ಕಾಡಾನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆ ಸಂದರ್ಭದಲ್ಲಿ ಅರಣ್ಯ ಸಿಬ್ಬಂದಿ ಗಿರೀಶ್ ಎಂಬುವವರು ಆನೆ ದಾಳಿಯಿಂದ ಮೃತಪಟ್ಟಿದ್ದರು. ದುಬಾರೆ ಆನೆ ಶಿಬಿರದ 5 ಸಾಕಾನೆಗಳ ನೆರವಿನಿಂದ ಸುಮಾರು 100 ಮಂದಿ ಅರಣ್ಯ ಇಲಾಖೆಯ ಸಿಬ್ಬಂದಿ ಹರಸಾಹಸಪಟ್ಟು ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಕಳೆದ ಒಂದು ವಾರದಿಂದ ಆತಂಕ ಸೃಷ್ಟಿಸಿದ್ದ ಕಾಡಾನೆ ಸೆರೆಯಿಂದ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಆನೆ ಸೆರೆ ಹಿಡಿಯಲು ಅರಣ್ಯ ಇಲಾಖೆಯ ಸಿಬ್ಬಂದಿ ನಿನ್ನೆಯಿಂದ ಕಾಫಿ ತೋಟದಲ್ಲಿ ಕಾರ್ಯಾಚರಣೆ ನಡೆಸಿದ್ದರು. ಕಾಫಿ ತೋಟದಲ್ಲಿ ಕಾಣಿಸಿಕೊಂಡ ಕಾಡಾನೆಯ ಪತ್ತೆ ಮಾಡಿ ಮಧ್ಯಾಹ್ನದ ವೇಳೆಗೆ ಅರಿವಳಿಕೆ ಚುಚ್ಚುಮದ್ದು ನೀಡಲಾಯಿತು. ನಂತರ ಸ್ವಲ್ಪ ದೂರ ಓಡಿಹೋಗಿ ಸುಸ್ತಾಗಿ ಕೆಳಗೆ ಬಿದ್ದಿದ್ದ ಆನೆಗೆ ಮಾವುತರು ಮತ್ತು ಕಾವಾಡಿಗಳು ಹಗ್ಗ ಕಟ್ಟಿ ಸಾಕಾನೆಗಳ ಸಹಾಯದಿಂದ ಸೆರೆ ಹಿಡಿದಿದ್ದಾರೆ.
ಕಾಡಾನೆ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಬಲಿ:ಇತ್ತೀಚಿಗೆ, ಕೊಡಗು ಜಿಲ್ಲೆಯ ಸುಂಟಿಕೊಪ್ಪ ಸಮೀಪದ ಕೆದಕಲ್ ಗ್ರಾಮದಲ್ಲಿ ಸೋಮವಾರ ಕಾಡಾನೆ ಕಾರ್ಯಾಚರಣೆಗೆ ತೆರಳಿದ್ದ ಅರಣ್ಯ ಇಲಾಖೆ ಸಿಬ್ಬಂದಿಯೊಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದರು. ಅರಣ್ಯ ಇಲಾಖೆಯ ಆನೆ ಕಾರ್ಯಪಡೆಯ ಸಿಬ್ಬಂದಿ ಗಿರೀಶ್ (35) ಮೃತಪಟ್ಟವರು. ಸುಂಟಿಕೊಪ್ಪ ಸಮೀಪದ ಕೆದಕಲ್ ಗ್ರಾಮದಲ್ಲಿ ಕಾಡಾನೆ ಕಾರ್ಯಾಚರಣೆಗೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದರು. ಈ ವೇಳೆ, ಆನೆ ದಾಳಿ ಮಾಡಿದ್ದರಿಂದ ಗಿರೀಶ್ ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದರು.