ಕೊಡಗು/ದ.ಕನ್ನಡ/ಉತ್ತರಕನ್ನಡ:ರಾಜ್ಯಾದ್ಯಂತ ಜುಲೈ 9ರವರೆಗೆ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಮೂರೂ ಜಿಲ್ಲೆಗಳಲ್ಲಿ ಇಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ವರುಣನ ಆರ್ಭಟ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ವಿಸ್ತರಿಸಲಾಗಿದೆ.
ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ಮಳೆ ತಗ್ಗದ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಗುರುವಾರವೂ ಕೂಡ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ(ಕೆಲ ತಾಲೂಕು) ಹಾಗೂ ಹಾಸನ(ಕೆಲ ತಾಲೂಕುಗಳಲ್ಲಿ ಮಾತ್ರ) ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ದಾವಣಗೆರೆ ಜಿಲ್ಲೆಯಲ್ಲಿಯೂ 2 ದಿನಗಳ ಕಾಲ ಮಳೆ ಜೋರಾಗುವ ಸಾಧ್ಯತೆ ಇದೆ. ಹಾಗಾಗಿ, ಯೆಲ್ಲೋ ಅಲರ್ಟ್ ನೀಡಲಾಗಿದೆ.
ಹಾಸನ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ. ಅರಕಲಗೂಡು, ಆಲೂರು, ಸಕಲೇಶಪುರ ತಾಲೂಕುಗಳಲ್ಲಿ ರಜೆ ಘೋಷಿಸಲಾಗಿದ್ದು, ಕಾಲೇಜು ತರಗತಿಗಳು ಎಂದಿನಂತೆ ನಡೆಯಲಿವೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ.
ಶಿವಮೊಗ್ಗದ ಜಿಲ್ಲಾದ್ಯಂತ ಶಾಲೆಗೆ ರಜೆ:ಜಿಲ್ಲೆಯ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ನಿನ್ನೆ ಸಾಗರ, ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಆದರೆ ಇಂದಿನಿಂದ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಶಿವಮೊಗ್ಗ, ಭದ್ರಾವತಿ, ಶಿಕಾರಿಪುರ ಹಾಗೂ ಸೊರಬ ತಾಲೂಕಿನ ಶಾಲೆಗಳಿಗೂ ರಜೆ ಘೋಷಿಸಲಾಗಿದೆ. ಆದರೆ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.
ಮಳೆ ಹಿನ್ನೆಲೆಯಲ್ಲಿ ತಾಲೂಕಿನ ದಂಡಾಧಿಕಾರಿಗಳಿಗೆ ತಾಲೂಕು ಕೇಂದ್ರದಲ್ಲಿಯೇ ಇರುವಂತೆ, ಎಲ್ಲಾ ರೀತಿ ಸಮಸ್ಯೆ ಎದುರಿಸಲು ತಂಡ ರಚನೆ ಮಾಡುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ತಹಶೀಲ್ದಾರ್ರಿಗೆ ಸೂಚನೆ ನೀಡಿದ್ದಾರೆ. ಈಗಾಗಲೇ ಸಾಗರ ನಗರಸಭೆಯಿಂದ ಮಳೆ ಹಾನಿಯಿಂದ ಉಂಟಾಗುವ ಸಮಸ್ಯೆ ಎದುರಿಸಲು ತಂಡ ರಚನೆ ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಕೆಲ ತಾಲೂಕುಗಳಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಜಿಲ್ಲಾಡಳಿತ 3 ದಿನಗಳ ಕಾಲ ರಜೆ ನೀಡಿದೆ. ಮೂಡಿಗೆರೆ, ಕಳಸ, ಎನ್.ಆರ್ ಪುರ, ಕೊಪ್ಪ, ಶೃಂಗೇರಿ ಹಾಗೂ ಚಿಕ್ಕಮಗಳೂರು(ಲಕ್ಯಾ, ಅಂಬಳೆ ಹೋಬಳಿ ಹೊರತುಪಡಿಸಿ) ತಾಲೂಕಿನ ಶಾಲೆಗಳಿಗೆ ಜುಲೈ 9ರ ತನಕ ರಜೆ ನೀಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಹಾಗೂ ಬೀದರ್, ಕಲಬುರಗಿ ಜಿಲ್ಲೆಗಳಲ್ಲೂ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ:ನಡು ರಸ್ತೆಯಲ್ಲೇ ಮುದ್ದಾದ ಮರಿಗೆ ಜನ್ಮ ನೀಡಿದ ಆನೆ.. ಗಂಟೆಗಳ ಕಾಲ ಸಂಚಾರ ಬಂದ್!