ಮಡಿಕೇರಿ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಗುಡ್ಡೆಮನೆ ಅಪ್ಪಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿಯಿಂದ, ಸ್ವಾತಂತ್ರ್ಯ ಹೋರಾಟಗಾರ ಹುತಾತ್ಮ ಗುಡ್ಡೆಮನೆ ಅಪ್ಪಯ್ಯಗೌಡರ 182ನೇ ಸಂಸ್ಮರಣಾ ದಿನಾಚರಣೆಯನ್ನು ಆಚರಿಸಲಾಯಿತು.
ಸ್ವಾತಂತ್ರ್ಯ ಹೋರಾಟಗಾರ ಹುತಾತ್ಮ ಗುಡ್ಡೆಮನೆ ಅಪ್ಪಯ್ಯಗೌಡರ ಸಂಸ್ಮರಣಾ ದಿನಾಚರಣೆ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ವೃತ್ತದಲ್ಲಿರುವ ಗುಡ್ಡೆಮನೆ ಅಪ್ಪಯ್ಯಗೌಡರ ಪ್ರತಿಮೆಗೆ ಗಣ್ಯರು ಪುಷ್ಪಾರ್ಚನೆ ಮಾಡಿದರು. ಬಳಿಕ ಪ್ರತಿಮೆ ಬಳಿಯಿಂದ ಗುಡ್ಡೆಮನೆ ಅಪ್ಪಯ್ಯಗೌಡರನ್ನು ಗಲ್ಲಿಗೇರಿಸಿದ ಕೋಟೆ ಆವರಣದ ಸ್ಮಾರಕದವರೆಗೆ ಮೌನ ಮೆರವಣಿಗೆ ನಡೆಯಿತು. ಸ್ವಾತಂತ್ರ್ಯ ಹೋರಾಟಗಾರನ್ನು ಗಲ್ಲಿಗೇರಿಸಿದ ಸ್ಥಳದಲ್ಲಿ ಪುಷ್ಪಾರ್ಚನೆ ಮಾಡಿ, ವಿಶೇಷ ಗೌರವ ಅರ್ಪಿಸಿ, ಸ್ಮರಿಸಲಾಯಿತು.
ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದ್ದ ಹುತಾತ್ಮ ಗುಡ್ಡೆಮನೆ ಅಪ್ಪಯ್ಯ ಗೌಡರಂತಹ ಸ್ವಾತಂತ್ರ್ಯ ಸೇನಾನಿಯನ್ನು ಸದಾ ಸ್ಮರಿಸುವಂತಾಗಬೇಕು. ಸಿಪಾಯಿ ಧಂಗೆಗೂ ಮೊದಲೇ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಸಮರ ಸಾರಿದ್ದ ಗುಡ್ಡೆಮನೆ ಅಪ್ಪಯ್ಯಗೌಡರನ್ನು 1837ರ ಅಕ್ಟೋಬರ್, 31 ರಂದು ಬ್ರಿಟಿಷರು ಗಲ್ಲಿಗೇರಿಸಿದ್ದರು. ಅವರ ಸ್ವಾತಂತ್ರ್ಯ ಹೋರಾಟ ಸ್ಮರಣೀಯ ಎಂದು ಗಣ್ಯರು ವೀರ ಹೋರಾಟಗಾರನನ್ನು ಸ್ಮರಿಸಿದರು.
ಈ ಸಂದರ್ಭ ಶಾಸಕ ಕೆ ಜಿ ಬೋಪಯ್ಯ, ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ, ಕೊಡಗು ಡಿಸಿ ಅನೀಸ್ ಕಣ್ಮನಿ ಜಾಯ್, ಎಸ್ಪಿ ಡಾ ಸುಮನ್ ಡಿ ಪನ್ನೇಕರ್ ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು.