ಕರ್ನಾಟಕ

karnataka

ETV Bharat / state

77 ನೇ ಸ್ವಾತಂತ್ರ್ಯ ದಿನಾಚರಣೆ: ಕೋಲಾರದಲ್ಲಿ ಹೆಲಿಕಾಪ್ಟರ್ ಮೂಲಕ ಪುಷ್ಪಾರ್ಚನೆ.. ವಿವಿಧ ಜಿಲ್ಲೆಗಳಲ್ಲಿ ಸ್ವಾತಂತ್ರ್ಯ ಸಂಭ್ರಮ - ರಾಯಚೂರು ಸ್ವಾತಂತ್ರ್ಯ ದಿನಾಚರಣೆ

77th Independence Day: ರಾಜ್ಯದ ವಿವಿಧೆಡೆಯಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

77th Independence Day
77th Independence Day

By

Published : Aug 15, 2023, 12:54 PM IST

Updated : Aug 15, 2023, 1:45 PM IST

77 ನೇ ಸ್ವಾತಂತ್ರ್ಯ ದಿನಾಚರಣೆಯ ದೃಶ್ಯಗಳು

ಕೋಲಾರ:77 ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಇಂದು ಕೋಲಾರದಲ್ಲಿ ನಡೆದ ಪಥಸಂಚಲನಕ್ಕೆ ಹೆಲಿಕಾಪ್ಟರ್ ಮೂಲಕ ಪುಷ್ಪಾರ್ಚನೆ ಸಲ್ಲಿಸಿದ್ದು ವಿಶೇಷವಾಗಿತ್ತು. ಇಂದು ಕೋಲಾರ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ 77 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಧ್ವಜಾರೋಹಣ ನೆರವೇರಿಸಿದರು. ಅಲ್ಲದೆ ಧ್ವಜವಂದನೆ ಸ್ವೀಕರಿಸುವ ಮೂಲಕ ಪಥಸಂಚಲನಕ್ಕೆ ಚಾಲನೆ ನೀಡಿದರು. ಈ ವೇಳೆ ಪಂಥಸಂಚಲನೆ ಮಾಡುವಂತಹ ತಂಡಗಳ ಮೇಲೆ ಹೆಲಿಕಾಪ್ಟರ್ ಮೂಲಕ ಪುಷ್ಪಾರ್ಚನೆ ಮಾಡಿದ್ದು ವಿಶೇಷವಾಗಿತ್ತು. ಇನ್ನು, ಅಂತರಗಂಗೆ ವಿಕಲಚೇತನರು ಸೇರಿದಂತೆ ಪೊಲೀಸ್ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.

ಇದೇ ವೇಳೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿಬಂದವು‌. ಕಾರ್ಯಕ್ರಮದಲ್ಲಿ ಕೋಲಾರ ಶಾಸಕ ಕೊತ್ತೂರು ಮಂಜುನಾಥ್, ಸಂಸದ ಎಸ್.ಮುನಿಸ್ವಾಮಿ, ಎಂ. ಎಲ್. ಸಿಗಳಾದ ಗೋವಿಂದರಾಜು, ಅನಿಲ್ ಕುಮಾರ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಇತರ ಜಿಲ್ಲೆಗಳ ಕಾರ್ಯಕ್ರಮ ವಿವರ:

ಕಾರವಾರದಲ್ಲಿ ಸಚಿವ ಮಂಕಾಳ ವೈದ್ಯರಿಂದ ಧ್ವಜಾರೋಹಣ: 77ನೇ ಸ್ವಾತಂತ್ರ್ಯೋತ್ಸವವನ್ನು ಜಿಲ್ಲಾ ಕೇಂದ್ರ ಕಾರವಾರದಲ್ಲಿ ಜಿಲ್ಲಾ ‌ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು. ಕಾರವಾರದ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ 77 ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣದ ಬಳಿಕ ಪರೇಡ್ ಕಮಾಂಡರ್ ಅವರ ಕೋರಿಕೆಯಂತೆ ತೆರೆದ ವಾಹನದ ಮೂಲದ ಪರೇಡ್ ತಂಡಗಳ ಬಳಿ ತೆರಳಿ ಪರಿವೀಕ್ಷಣೆ ನಡೆಸಿದರು. ಬಳಿಕ ಮೈದಾನದಲ್ಲಿ ಪೊಲೀಸ್,‌ ಅರಣ್ಯ, ಹೋಂಗಾರ್ಡ್, ಎನ್‌ಸಿಸಿ ಸೇರಿ ವಿವಿಧ ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಸಚಿವರು ಪಥಸಂಚಲನ ತಂಡದಿಂದ ಗೌರವ ವಂದನೆ ಸ್ವೀಕರಿಸಿದರು.

ಬೆಳಗಾವಿಯಲ್ಲಿ 77ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಸ್ವಾತಂತ್ರ್ಯ ಹೋರಾಟದಲ್ಲಿ ಬೆಳಗಾವಿ ಜಿಲ್ಲೆಯ ಪಾತ್ರವು ಕಡಿಮೆ ಇಲ್ಲ. ಅಪ್ರತಿಮ ಹೋರಾಟಗಾರರು, ಅಪ್ಪಟ ದೇಶಭಕ್ತರು, ಸ್ವಾಭಿಮಾನಿ ಸೇನಾನಿಗಳನ್ನು ದೇಶಕ್ಕೆ ಕೊಡುಗೆ ನೀಡಿರುವ ಜಿಲ್ಲೆಯು ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿತ್ತು ಎಂದು ಲೋಕೋಪಯೋಗಿ ಇಲಾಖೆ ಸಚಿವರು ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.

ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 77ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕಿತ್ತೂರು ರಾಣಿ ಚೆನ್ನಮ್ಮ ಮೊಳಗಿಸಿದ ಸ್ವಾತಂತ್ರ್ಯದ ಕಹಳೆಯು ಕಾಡ್ಗಿಚ್ಚಿನಂತೆ ಎಲ್ಲೆಡೆ ಹಬ್ಬಿತ್ತು. ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆ ಹೊಂದಿದ್ದ ಚೆನ್ನಮ್ಮ, ಆಂಗ್ಲರ ಈಸ್ಟ್ ಇಂಡಿಯಾ ಕಂಪೆನಿಗೆ ದುಃಸ್ವಪ್ನವಾಗಿ ಕಾಡಿದ್ದಳು. ಅದೇ ಕಿತ್ತೂರು ಸಂಸ್ಥಾನದಲ್ಲಿ ಸೇನಾಧಿಪತಿಯಾಗಿದ್ದ ಸಂಗೊಳ್ಳಿ ರಾಯಣ್ಣ ಆಂಗ್ಲರ ಬಂದೂಕುಗಳಿಗೆ ಬೆದರದೇ ತಾಯ್ನಾಡಿನ ಸ್ವಾತಂತ್ರ್ಯಕ್ಕಾಗಿ ನೇಣುಗಂಬಕ್ಕೇರಿದ ಅಪ್ರತಿಮ ದೇಶಭಕ್ತ. ಅಂತಹ ರಾಯಣ್ಣ ಹುಟ್ಟಿದ್ದು ಆಗಸ್ಟ್ 15ರಂದು ವೀರಮರಣವನ್ನಪ್ಪಿದ್ದು ಜನವರಿ 26 ಎಂದರು.

ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಮತ್ತೊಬ್ಬ ಮಹನೀಯರು ಗಂಗಾಧರ ದೇಶಪಾಂಡೆ. ‘ಕರ್ನಾಟಕದ ಸಿಂಹ’ ಹಾಗೂ ‘ಕರ್ನಾಟಕದ ಖಾದಿ ಭಗೀರಥ’ ಎಂದು ಗುರುತಿಸಿಕೊಂಡಿದ್ದ ದೇಶಪಾಂಡೆಯವರ ಕೊಡುಗೆ ಅಪಾರ. ಇವರ ಜತೆಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ಅನೇಕರನ್ನು ಇಂದು ನಾವು ನೆನಪಿಸಿಕೊಳ್ಳಬೇಕು ಎಂದು ಸತೀಶ್​ ಜಾರಕಿಹೊಳಿ ಕರೆ ನೀಡಿದರು.

‘ಸ್ವಾತಂತ್ರ್ಯ' ಎಂದರೆ ಸ್ವಾಭಿಮಾನ. ತಮ್ಮ ಬದುಕನ್ನು ಪಣಕ್ಕಿಟ್ಟು ದೇಶಕ್ಕೆ ಇಂತಹ ಸ್ವಾಭಿಮಾನವನ್ನು ತಂದುಕೊಟ್ಟ ಮಹನೀಯರನ್ನು ಇಂದು ನಾವೆಲ್ಲರೂ ನೆನಪಿಸಿಕೊಳ್ಳಬೇಕಿದೆ. ದೇಶ ಸ್ವತಂತ್ರಗೊಂಡು ಇಂದಿಗೆ 76 ವರ್ಷಗಳಾದವು. ‌ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ ಅಹಿಂಸಾತ್ಮಕ ಹೋರಾಟದ ಮೂಲಕ ಭಾರತೀಯರುಗಳಿಸಿದ ಸ್ವಾತಂತ್ರ್ಯವು ಜಗತ್ತಿನ ರಾಜಕೀಯ ಚರಿತ್ರೆಯಲ್ಲಿ ಹೊಸ ಅಧ್ಯಾಯವನ್ನು ಆರಂಭಿಸಿದೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿ ಹಾಕಿದೆ ಎಂದು ಶ್ಲಾಘಿಸಿದರು.

ಈ ಶುಭ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ಮಹಾತ್ಮಾಗಾಂಧೀಜಿ, ಡಾ. ಬಾಬಾಸಾಹೇಬ್ ಅಂಬೇಡ್ಕರ್, ಸುಭಾಷ್‌ಚಂದ್ರ ಬೋಸ್, ಜವಾಹರಲಾಲ್ ನೆಹರೂ, ಲಾಲ್‌ಬಹದ್ದೂರ್ ಶಾಸ್ತ್ರಿ, ಬಾಲಗಂಗಾಧರ್​ ತಿಲಕ್​ ಸೇರಿದಂತೆ ಇನ್ನೂ ಅನೇಕ ಮಹನೀಯರನ್ನು ನೆನಪಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರವು ಅನೇಕ ಜನಪರ ಕಾರ್ಯಕ್ರಮಗಳನ್ನು ರೂಪಿಸಿದೆ.

ಸಾಮಾಜಿಕ ನ್ಯಾಯ ಹಾಗೂ ಸಮಾನತೆಯ ಹಾದಿಯಲ್ಲಿ ದೃಢವಾದ ಹೆಜ್ಜೆಯನ್ನು ಇಟ್ಟಿದೆ. ಜನರಿಗೆ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳಾದ ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮೀ ಹಾಗೂ ಯುವನಿಧಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಮೂಲಕ ನುಡಿದಂತೆ ನಡೆಯುತ್ತಿದೆ ಎಂದು ಸತೀಶ್ ಜಾರಕಿಹೊಳಿ ವಿವರಿಸಿದರು.

ರಾಯಚೂರಲ್ಲೂ ಸಂಭ್ರಮ:ಬಿಸಿಲೂರು ರಾಯಚೂರು ಜಿಲ್ಲೆಯಾದ್ಯಂತ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಸ್ವಾತಂತ್ರೋತ್ಸವ ದಿನಾಚರಣೆ ಸಮಾರಂಭದಲ್ಲಿ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ರಾಷ್ಟ್ರಧ್ವಜಾರೋಹಣ ನೇರವೇರಿಸಿದರು. ನಂತರ ಅಲಂಕೃತಗೊಂಡ ತೆರದ ವಾಹನದಲ್ಲಿ ಸಚಿವರು ಗೌರವವಂದನೆ ಸ್ವೀಕರಿಸಿದರು.

ಬಳಿಕ ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ, ಅರಣ್ಯ ಇಲಾಖೆ, ಗೃಹರಕ್ಷಕ ದಳ, ಸಿವಿಲ್ ಪೊಲೀಸ್, ಭಾರತ ಸೇವಾದಳ, ಎನ್‌ಎಸ್‌ಎಸ್, ಸ್ಕೌಟ್ಸ್​​ ಆ್ಯಂಡ್ ಗೈಡ್ಸ್​, ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನೇರವೇರಿತು. ಇದಾದ ನಂತರ ಸ್ವಾತಂತ್ರ್ಯ ಹೋರಾಟಗಾರರನ್ನು ಜಿಲ್ಲಾಡಳಿತ ಸನ್ಮಾನಿಸಿ ಗೌರವಿಸಲಾಯಿತು. ಸಮಾರಂಭದಲ್ಲಿ ಶಾಸಕ ಬಸನಗೌಡ ದದ್ದಲ್, ಜಿಲ್ಲಾಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕ ಭಾಗವಹಿಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆಯಿಂದ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

ಇದನ್ನೂ ಓದಿ:CM siddaramaiah: ಅನ್ನಬ್ರಹ್ಮ ರೈತ, ಸುಭದ್ರ ಕರ್ನಾಟಕದ ಅಭಿವೃದ್ಧಿಯೇ ಗುರಿ: ಸಿಎಂ ಸಿದ್ದರಾಮಯ್ಯ

Last Updated : Aug 15, 2023, 1:45 PM IST

ABOUT THE AUTHOR

...view details