ಕೋಲಾರ: ಲಾಂಗು, ಮಚ್ಚು ಹಿಡಿದು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿರುವ ಘಟನೆ ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ನಡೆದಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಫೇಮಸ್ ಆಗಲು ಲಾಂಗ್ ಮತ್ತು ಮಚ್ಚು ಹಿಡಿದು ವೀಡಿಯೋಗಳನ್ನು ಮಾಡಿ ಹರಿಬಿಟ್ಟಿರುವ ಯುವಕರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಇಲ್ಲಿಯ ನರಸಾಪುರದ ವೇಣು ಮತ್ತು ಪವನ್ ಕುಮಾರ್ ಎಂಬ ಇಬ್ಬರು ಯುವಕರನ್ನು ಇದೇ ವಿಚಾರದಲ್ಲಿ ಬಂಧಿಸಲಾಗಿತ್ತು. ಇಂದು ಮಂಜುನಾಥ್ ಹಾಗೂ ನವೀನ್ ಕುಮಾರ್ ಎಂಬ ಇಬ್ಬರು ಯುವಕರನ್ನು ಅಕ್ರಮ ಶಸ್ತಾಸ್ತ್ರ ಕಾಯ್ದೆ ಪ್ರಕರಣದಡಿಯಲ್ಲಿ ಬಂಧಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಯುವಕರು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುತ್ತಿರುವುದನ್ನು ತಡೆಗಟ್ಟುವ ದೃಷ್ಟಿಯಿಂದ ಪೊಲೀಸರು ಈ ಕಾರ್ಯಕ್ಕೆ ಮುಂದಾಗಿದ್ದಾರೆ. ಜತೆಗೆ ಕೋಲಾರ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸಾಮಾಜಿಕ ಜಾಲತಾಣದ ಮೇಲೂ ಪೊಲೀಸರು ನಿಗಾ ಇಟ್ಟಿದ್ದು, ವೇಮಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 3 ಪ್ರಕರಣ ಹಾಗೂ ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ಈ ಮೂಲಕ ಕೋಲಾರ ಜಿಲ್ಲಾ ಪೊಲೀಸರು ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಲು ಕಾನೂನುಅನ್ನು ಮತ್ತಷ್ಟು ಬಿಗಿಗೊಳಿಸಲು ಮುಂದಾಗಿದೆ.