ಕೋಲಾರ: 31 ವರ್ಷ ಹಿಂದಿನ ಗಲಭೆ ಪ್ರಕರಣದ ಆರೋಪಿ ಬಂಧನ ಖಂಡಿಸಿ ಕೋಲಾರದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ವೃತ್ತದಲ್ಲಿ ಪ್ರತಿಭಟಿಸಿದ ಕಾರ್ಯಕರ್ತರು, 31 ವರ್ಷಗಳ ಹಿಂದಿನ ಪ್ರಕರಣವನ್ನು ರೀ ಓಪನ್ ಮಾಡಿ ಹಿಂದೂ ಕಾರ್ಯಕರ್ತನ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿರುವ ಕ್ರಮವನ್ನು ತ್ರೀವವಾಗಿ ಖಂಡಿಸಿದರು.
ಬಳಿಕ ಮಾತನಾಡಿದ ಸಂಸದ ಮುನಿಸ್ವಾಮಿ, "ಬಿಜೆಪಿಯ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರ ಕರೆಯ ಮೇರೆಗೆ ಪ್ರತಿಭಟನೆ ನಡೆಸುತ್ತಿದ್ದೇವೆ. 31 ವರ್ಷ ಹಿಂದಿನ ಗಲಭೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಹುಬ್ಬಳ್ಳಿಯ ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿಯನ್ನು ಕೂಡಲೇ ಬಿಡುಗಡೆ ಮಾಡಬೇಕು. ರಾಜ್ಯದಲ್ಲಿ ರಾಮಭಕ್ತರು ಮತ್ತು ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಜ.22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಆಗುತ್ತಿರುವುದರಿಂದ ರಾಜ್ಯ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದವರಲ್ಲಿ ಬೆಂಕಿ ಹೊತ್ತಿಕೊಂಡಿದೆ" ಎಂದು ಆರೋಪಿಸಿದರು.
ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, "ರಾಜಕೀಯಕೋಸ್ಕರ ಬಿಜೆಪಿಯವರು ಶ್ರೀರಾಮನ ಹೆಸರನ್ನು ಹೇಳುತ್ತಿದ್ದಾರೆ ಎಂದು ಬಿ ಕೆ ಹರಿಪ್ರಸಾದ್ ಆರೋಪಿಸುತ್ತಿದ್ದಾರೆ. ಅವರನ್ನು ಕಾಂಗ್ರೆಸ್ನಲ್ಲಿ ಯಾವ ಮಟ್ಟಕ್ಕೆ ನೋಡುತ್ತಿದ್ದಾರೆ ಎಂದು ಇಡೀ ರಾಜ್ಯದ ಜನರಿಗೆ ಗೊತ್ತಿದೆ" ಎಂದು ತಿರುಗೇಟು ನೀಡಿದರು.