ಬೆಂಗಳೂರು:ಕಾಂಗ್ರೆಸ್ ಪಕ್ಷ ಇಂದು ಪ್ರಕಟಿಸಿದ ವಿಧಾನಸಭೆ ಚುನಾವಣೆಯ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲೂ ಸಹ ಕೋಲಾರ ಕ್ಷೇತ್ರಕ್ಕೆ ಯಾವುದೇ ಅಭ್ಯರ್ಥಿಯ ಹೆಸರನ್ನು ಕಾಂಗ್ರೆಸ್ ಘೋಷಣೆ ಮಾಡಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸಲು ಟಿಕೆಟ್ ನೀಡುವಂತೆ ಹೈಕಮಾಂಡ್ ಮೇಲೆ ತೀವ್ರ ಒತ್ತಡವನ್ನು ಹೇರಿದ್ದಾರೆ. ಈ ಹಿನ್ನೆಲೆ ಸದ್ಯಕ್ಕೆ ಒಮ್ಮತದ ತೀರ್ಮಾನಕ್ಕೆ ಬರಲಾಗದೆ ಕಾಂಗ್ರೆಸ್ ಹೈಕಮಾಂಡ್ ಕೋಲಾರಕ್ಕೆ ಅಭ್ಯರ್ಥಿ ಘೋಷಣೆ ಮಾಡದೆ ಹಾಗೆ ಬಾಕಿ ಉಳಿಸಿಕೊಂಡಿದೆ ಎನ್ನುವ ಮಾತುಗಳು ಕೇಳಿ ಬಂದಿವೆ.
ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡಲು ಸಿದ್ದರಾಮಯ್ಯನವರ ಪ್ರಥಮ ಆಯ್ಕೆಯೇ ಕೋಲಾರ ಕ್ಷೇತ್ರವಾಗಿತ್ತು. ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವುದಾಗಿ ಅವರು ಘೋಷಣೆ ಮಾಡಿದ್ದರು. ಆದರೆ ಕಾಂಗ್ರೆಸ್ ಹೈಕಮಾಂಡ್ ಸಮೀಕ್ಷಾ ವರದಿಗಳು ಮತ್ತು ಸ್ಥಳೀಯ ಕಾಂಗ್ರೆಸ್ ಮುಖಂಡರುಗಳ ನಡುವಿನ ಒಳಜಗಳಗಳಿಂದ ಸಿದ್ದರಾಮಯ್ಯ ಗೆಲುವು ಕಷ್ಟವೆನ್ನುವ ಆಂತರಿಕ ಮಾಹಿತಿ ಹಿನ್ನೆಲೆಯಲ್ಲಿ ಕೋಲಾರ ಕ್ಷೇತ್ರವು ಸಿದ್ದರಾಮಯ್ಯನವರ ಗೆಲುವಿಗೆ ಸುರಕ್ಷಿತವಲ್ಲವೆನ್ನುವ ಈ ಕ್ಷೇತ್ರ ಹೊರತುಪಡಿಸಿ ಬೇರೆ ಕ್ಷೇತ್ರ ಆಯ್ಕೆ ಮಾಡಿಕೊಳ್ಳಲು ಸಲಹೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ತಮ್ಮ ಕುಟುಂಬ ಹಾಗೂ ಹಿತೈಷಿಗಳ ಜೊತೆ ಸಮಾಲೋಚನೆ ನಡೆಸಿ ಕೋಲಾರದ ಬದಲು ವರುಣಾದಲ್ಲಿ ಸ್ಪರ್ಧೆ ಮಾಡುವುದಾಗಿ ಪ್ರಕಟಿಸಿದ್ದರು.
ಸಿದ್ದರಾಮಯ್ಯನವರ ಅಪೇಕ್ಷೆಯಂತೆ ಕಾಂಗ್ರೆಸ್ ಹೈಕಮಾಂಡ್ ಮೊದಲ ಪಟ್ಟಿಯಲ್ಲಿ ವರುಣ ಕ್ಷೇತ್ರದಲ್ಲಿ ಸ್ಪರ್ಧಿಸಲು ಸಿದ್ದರಾಮಯ್ಯನವರಿಗೆ ಟಿಕೆಟ್ ಘೋಷಣೆ ಮಾಡಿತ್ತು. ಈ ಬೆಳವಣಿಗೆ ನಂತರ ಸಿದ್ದರಾಮಯ್ಯನವರು ವರುಣ ಕ್ಷೇತ್ರದ ಜೊತೆಗೆ ಕೋಲಾರ ಕ್ಷೇತ್ರದಿಂದಲೂ ತಮಗೆ ಸ್ಪರ್ಧೆ ಮಾಡಲು ಅವಕಾಶ ನೀಡಬೇಕೆಂದು ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದರು. ಕೋಲಾರ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರಿಗೆ ಸ್ಪರ್ಧೆ ಮಾಡಲು ಅವಕಾಶ ನೀಡುವ ಸಂಬಂಧ ಚರ್ಚೆ ನಡೆಸಿದ ಎಐಸಿಸಿಯ ಕೇಂದ್ರ ಚುನಾವಣಾ ಸಮಿತಿ ಯಾವುದೇ ನಿರ್ಧಾರಕ್ಕೆ ಬರಲಾಗದೆ ಎರಡನೇ ಪಟ್ಟಿ ಪ್ರಕಟಣೆ ಸಂದರ್ಭದಲ್ಲಿ ಕೋಲಾರ ಕ್ಷೇತ್ರವನ್ನು ಬಾಕಿ ಉಳಿಸಿಕೊಂಡಿದೆ.