ಕೋಲಾರ:ನಗರದ ಹೊರವಲಯ ಕೊಂಡರಾಜನಹಳ್ಳಿ ಬಳಿ ಪಾದಚಾರಿ ಮೇಲೆ ಖಾಸಗಿ ಬಸ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದು, ಈ ಹಿನ್ನೆಲೆಯಲ್ಲಿ ಸ್ಥಳೀಯರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಸಾವನ್ನಪ್ಪಿರುವ ವ್ಯಕ್ತಿಯ ಶವ ಇಟ್ಟು ಗ್ರಾಮಸ್ಥರ ಪ್ರತಿಭಟನೆ ಕೊಂಡರಾಜನಹಳ್ಳಿ ನಿವಾಸಿ ಶ್ರೀಧರ್ (28) ಮೃತ ದುರ್ದೈವಿ. ಹೆದ್ದಾರಿ ದಾಟುವ ವೇಳೆ ವೇಗವಾಗಿ ಬಂದ ಖಾಸಗಿ ಬಸ್ ಶ್ರೀಧರ್ ಅವರ ಮೇಲೆ ಹರಿದಿದೆ. ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ಬಸ್ ಮೇಲೆ ಕಲ್ಲು ತೂರಾಟ ನಡೆಸಿ ಹೆದ್ದಾರಿಯಲ್ಲಿ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ.
ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ವ್ಯಕ್ತಿ ಈ ವೇಳೆ ಸ್ಥಳಕ್ಕೆ ಬಂದ ಗ್ರಾಮಾಂತರ ಠಾಣಾ ಪೊಲೀಸರು ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನ ಮಾಡಿದರಾದರೂ ಪ್ರಯೋಜನವಾಗಲಿಲ್ಲ. ಬಳಿಕ ಗುಂಪನ್ನು ಚದುರಿಸಲು ಲಘು ಲಾಠಿ ಪ್ರಹಾರ ಮಾಡಿ ಹೆದ್ದಾರಿಯನ್ನು ತೆರವುಗೊಳಿಸಿದರು.
ಸುಮಾರು ಒಂದು ಗಂಟೆಗೂ ಅಧಿಕ ಕಾಲ ಹೆದ್ದಾರಿ ತಡೆ ಮಾಡಿದ್ದರಿಂದ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಈ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.