ಕರ್ನಾಟಕ

karnataka

ETV Bharat / state

ಮಕ್ಕಳನ್ನು ಮಲದ ಗುಂಡಿಗಿಳಿಸಿ ಸ್ವಚ್ಚಗೊಳಿಸಿದ ಪ್ರಕರಣ: ವಸತಿ ಶಾಲೆಯ ಪ್ರಾಂಶುಪಾಲೆ ಸೇರಿ ನಾಲ್ವರು ಅಮಾನತು

ಕೋಲಾರದಲ್ಲಿ ವಸತಿ ಶಾಲೆಯ ಮಕ್ಕಳನ್ನು ಮಲದ ಗುಂಡಿಗಿಳಿಸಿ ಸ್ವಚ್ಚಗೊಳಿಸಿದ ಪ್ರಕರಣ ಸಂಬಂಧ ಪ್ರಾಂಶುಪಾಲೆ ಸೇರಿ ನಾಲ್ವರನ್ನು ಅಮಾನತು ಮಾಡಲಾಗಿದೆ.

Etv Bharat
Etv Bharat

By ETV Bharat Karnataka Team

Published : Dec 17, 2023, 6:58 PM IST

ಕೋಲಾರ:ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಚಗೊಳಿಸಿರುವ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ವಸತಿ ಶಾಲೆಯ ಪ್ರಾಂಶುಪಾಲೆ, ಇಬ್ಬರು ಶಿಕ್ಷಕರು ಹಾಗೂ ವಾರ್ಡನ್​ ಸೇರಿ ನಾಲ್ವರನ್ನು ಅಮಾನತುಗೊಳಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ.ಮಹದೇವಪ್ಪ ಅಮಾನತು ಆದೇಶ ಹೊರಡಿಸಿದ್ದಾರೆ. ಆರೋಪಿಗಳ ವಿರುದ್ಧ ಕ್ರಿಮಿನಲ್​ ಪ್ರಕರಣ ದಾಖಲಿಸುವಂತೆಯೂ ಸೂಚಿಸಿದ್ದಾರೆ. ವಸತಿ ಶಾಲೆ ಪ್ರಾಂಶುಪಾಲೆ ಭಾರತಮ್ಮ, ಶಿಕ್ಷಕರಾದ ಮುನಿಯಪ್ಪ ಮತ್ತು ಅಭಿಷೇಕ್​, ವಾರ್ಡನ್​ ಮಂಜುನಾಥ್​ ಅಮಾನತಾಗಿದ್ದಾರೆ.

ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ನ್ಯಾಯಾಧೀಶ ಸುನಿಲ್ ಹೊಸಮನಿ ಅವರು ಖುದ್ದು ಸ್ಥಳಕ್ಕೆ ಭೇಟಿ ನೀಡಿ​ ಪರಿಶೀಲನೆ ನಡೆಸಿದರು. ವಸತಿ ಶಿಕ್ಷಣ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ನವೀನ್ ಕುಮಾರ್​ ರಾಜು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ತಮ್ಮ ಮಕ್ಕಳಿಗೆ ಕಿರುಕುಳ ನೀಡಿರುವ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರು ಒತ್ತಾಯಿಸಿದರು.

ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಮಾಲೂರಿನಲ್ಲಿ ಮಲ ಸ್ವಚ್ಚ ಮಾಡಲು ಮಕ್ಕಳ ಬಳಕೆ ವಿಚಾರ ನನ್ನ ಗಮನಕ್ಕೆ ಬಂದಿದೆ. ವರದಿ ತರಿಸಿಕೊಳ್ಳುತ್ತೇನೆ. ಯಾರೇ ತಪ್ಪಿತಸ್ಥರಿದ್ರೂ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದರು.

ಬಿಜೆಪಿ ನಾಯಕರಿಂದ ಖಂಡನೆ:ಎಕ್ಸ್​ನಲ್ಲಿ ಪೋಸ್ಟ್​ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬೆಳಗಾವಿಯ ಮಹಿಳಾ ದೌರ್ಜನ್ಯದ ಬೆನ್ನಲ್ಲೇ ಮಕ್ಕಳ ಮೇಲಿನ ದೌರ್ಜನ್ಯದ ಘಟನೆ ಕೋಲಾರದ ಮಾಲೂರು ಯಲುವಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ ನಡೆದಿರುವುದು ನೋಡಿದರೆ ರಾಜ್ಯದ ಕಾಂಗ್ರೆಸ್ ಸರ್ಕಾರದ ಹಳಿ ತಪ್ಪಿದೆ. ಆಡಳಿತದಲ್ಲಿ ಮಹಿಳೆಯರು ಹಾಗೂ ಮಕ್ಕಳು ಸುರಕ್ಷಿತವಾಗಿರಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿರುವುದು ಬಿಂಬಿತವಾಗುತ್ತಿದೆ.

ಅದರಲ್ಲೂ ಪರಿಶಿಷ್ಟ ಸಮುದಾಯಕ್ಕೆ ಸೇರಿದವರೇ ದೌರ್ಜನ್ಯ ಶೋಷಣೆಗೆ ಗುರಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಮಾಲೂರಿನ ಘಟನೆಯಲ್ಲಿ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ದೈಹಿಕ ದೌರ್ಜನ್ಯ ನಡೆಸಿರುವುದು ಅತ್ಯಂತ ಹೇಯ ಘಟನೆಯಾಗಿದ್ದು, ಬಿಜೆಪಿ ಇದನ್ನು ಬಲವಾಗಿ ಖಂಡಿಸುತ್ತದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಹಾಗೂ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ನೈತಿಕ ಹೊಣೆ ಹೊರುವಂತೆ ಒತ್ತಾಯಿಸಿದ್ದಾರೆ.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಹೆಣ್ಣು ಮಕ್ಕಳ ಭ್ರೂಣ ಹತ್ಯೆ ಅವ್ಯಾಹತವಾಗಿ ನಡೆಯುತ್ತಿದೆ. ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ದೌರ್ಜನ್ಯ ಮಾಡಲಾಗಿದೆ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನಲ್ಲಿ ದಲಿತ ಶಾಲಾ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಚ ಮಾಡಲು ಬಳಕೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ನಿಷ್ಕ್ರಿಯವಾಗಿದೆ. ಯಾರಿಗೂ ಭಯ ಇಲ್ಲ. ಸರ್ಕಾರ ಅಧಿಕಾರಿಗಳ ಮೇಲೆ ಸಂಪೂರ್ಣ ಹಿಡಿತ ಕಳೆದುಕೊಂಡಿದೆ. ಇಲ್ಲಿ ಮಹಿಳೆಯರು, ಮಕ್ಕಳು, ದಲಿತರಿಗೆ ಸುರಕ್ಷತೆ ಇಲ್ಲದಂತ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರ್ಕಾರ ಇದ್ದೂ ಸತ್ತಂತಾಗಿದ್ದು, ನಿರ್ಜೀವ ಸರ್ಕಾರಕ್ಕೆ ರಾಜ್ಯದ ಜನತೆ ಹಿಡಿ ಶಾಪ ಹಾಕುವಂತಾಗಿದೆ ಎಂದು ಹೇಳಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, ಸರ್ಕಾರ ಬೆಳಗಾವಿ ಪ್ರಕರಣ, ಕೋಲಾರ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ. ಸಿಎಂ ಮತ್ತು ಮಂತ್ರಿಗಳು ಯಾವಾಗ ಕ್ಯಾಶುವಲ್ ಆಗಿರ್ತಾರೋ ಆಗ ಅಧಿಕಾರಿಗಳು ಗಂಭೀರವಾಗಿ ಇರೋದಿಲ್ಲ. ಅದಕ್ಕೆ ಇಂತಹ ಸ್ಥಿತಿಯಾಗಿದೆ ಎಂದು ದೂರಿದರು.

ಅಮಾನವೀಯ ಘಟನೆಯ ವಿವರ: ಮಾಲೂರು ತಾಲ್ಲೂಕು ಯಲವಳ್ಳಿ ಗ್ರಾಮದ ಬಳಿ ಇರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛಗೊಳಿಸಲಾಗಿದೆ. ಹಿರಿಯ ಶಿಕ್ಷಕರ ಸಮ್ಮುಖದಲ್ಲೇ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಇದರಿಂದ ಮಕ್ಕಳು ಮೈ ಕೈ ನೋವಿನಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿತ್ತು. ವಸತಿ ಶಾಲೆಯ ಹಿರಿಯ ಶಿಕ್ಷಕರು, ಸಿಬ್ಬಂದಿ ಕಿರುಕುಳ ನೀಡುತ್ತಿರುವುದಾಗಿ ಮಕ್ಕಳು ಪೋಷಕರಲ್ಲಿ ದೂರಿದ್ದರು. ವಸತಿ ಶಾಲೆಯಲ್ಲಿ ಸುಮಾರು 250ಕ್ಕೂ ಹೆಚ್ಚು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ಇದನ್ನೂ ಓದಿ:ವಸತಿ ಶಾಲೆ ವಿದ್ಯಾರ್ಥಿಗಳನ್ನು ಮಲದ ಗುಂಡಿಗೆ ಇಳಿಸಿ ಕ್ಲೀನಿಂಗ್​; ಕೋಲಾರದಲ್ಲಿ ಅಮಾನವೀಯ ಘಟನೆ

ABOUT THE AUTHOR

...view details