ಕೋಲಾರ : ವಿಧಾನಸಭೆ ಚುನಾವಣೆ ಪ್ರಚಾರ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಅವರು ಎಪ್ರಿಲ್ 30ರಂದು ಕೋಲಾರ ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಸಂಸದ ಮುನಿಸ್ವಾಮಿ ಮಾಹಿತಿ ನೀಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಎಪ್ರಿಲ್ 30ಕ್ಕೆ ಕೋಲಾರಕ್ಕೆ ಆಗಮಿಸಿ ಬೆಳಗ್ಗೆ 9 ಗಂಟೆಗೆ ಪ್ರಚಾರ ಕಾರ್ಯ ಆರಂಭಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ಹೊಸಕೋಟೆ ವಿಧಾನಸಭೆ ಕ್ಷೇತ್ರ, ಕೋಲಾರ ಕ್ಷೇತ್ರದಲ್ಲಿರುವ 6 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳು ಮತ್ತು ಮುಖಂಡರು ಭಾಗವಹಿಸಲಿದ್ದಾರೆ. ಜೊತೆಗೆ ಬಿಜೆಪಿ ಕಾರ್ಯಕರ್ತರು, ಮೋದಿಜಿ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಕಳೆದ ಒಂದು ವಾರದಿಂದ ನಾವು ಮೋದಿ ಆಗಮನ ಹಿನ್ನೆಲೆ ಸಿದ್ಧತಾ ಕಾರ್ಯಗಳನ್ನು ಮಾಡುತ್ತಿದ್ದೇವೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಜೊತೆಗೆ ಕೋಲಾರ ವಿಧಾನಸಭಾ ಕ್ಷೇತ್ರಗಳಿಂದ ಹೆಚ್ಚಿನ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ ವಿಧಾನಸೌಧಕ್ಕೆ ಕಳುಹಿಸಿಕೊಡಬೇಕು. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರ ಹಿಡಿಯುವಲ್ಲಿ ಸಹಕರಿಸಬೇಕೆಂದು ಮನವಿ ಮಾಡಿದರು.
ಇದನ್ನೂ ಓದಿ :ಸಿದ್ದರಾಮಯ್ಯ ವರುಣಾ ಕ್ಷೇತ್ರ ಅಭಿವೃದ್ಧಿ ಮಾಡಿದ್ದರೆ ಕೈ ಮುಗಿದು ನಾ ಹೊರಟು ಹೋಗುವೆ: ವಿ ಸೋಮಣ್ಣ ವ್ಯಂಗ್ಯ
ಮೋದಿ ಕಾರ್ಯಕ್ರಮ ಹಿನ್ನೆಲೆ ಕೋಲಾರ ತಾಲ್ಲೂಕಿನ ಕೆಂದಟ್ಟಿ ಗ್ರಾಮದ ಬಳಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗುತ್ತಿದೆ. ಇತ್ತೀಚೆಗೆ ಕೋಲಾರದಲ್ಲಿ ರಾಹುಲ್ ಗಾಂಧಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಿದ್ದರು. ಇದರ ಬೆನ್ನಲ್ಲೇ ಬಿಜೆಪಿ ನಾಯಕರು ಪ್ರಧಾನಿ ಮೋದಿಯವರನ್ನು ಕರೆಸಿ ಭರ್ಜರಿ ಪ್ರಚಾರ ನಡೆಸಲು ಸಿದ್ಧತೆ ನಡೆಸಿದ್ದಾರೆ. ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯಾದ್ಯಂತ ಪ್ರಧಾನಿ ಮೋದಿ ಬಿಜೆಪಿ ಪರ ಪ್ರಚಾರ ನಡೆಸಲಿದ್ದು, ಕೋಲಾರದಲ್ಲೂ ಮತಬೇಟೆ ನಡೆಸಲಿದ್ದಾರೆ. ಇಲ್ಲಿ ಬೃಹತ್ ಸಮಾವೇಶ ನಡೆಸುವ ಮೂಲಕ ಜಿಲ್ಲೆಯಲ್ಲಿ ಮತದಾರರನ್ನು ತನ್ನತ್ತ ಸೆಳೆಯಲು ಬಿಜೆಪಿ ಮುಂದಾಗಿದೆ.
ಕೆಂದಟ್ಟಿ ಗ್ರಾಮದಲ್ಲಿರುವ ಖಾಸಗಿ ಜಮೀನಿನಲ್ಲಿ ಮೋದಿ ಸಮಾವೇಶಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. 100 ಎಕರೆ ವಿಸ್ತಾರವಾದ ಪ್ರದೇಶದಲ್ಲಿ ನಡೆಯುವ ಸಮಾವೇಶಕ್ಕೆ ಲಕ್ಷಕ್ಕೂ ಅಧಿಕ ಮಂದಿ ಆಗಮಿಸುವ ನಿರೀಕ್ಷೆ ಇದ್ದು, ಬೃಹತ್ ವೇದಿಕೆ ಮತ್ತು ಜರ್ಮನ್ ಮಾದರಿ ಪೆಂಡಾಲ್ ನಿರ್ಮಾಣ ಮಾಡಲಾಗುತ್ತಿದೆ.
ಬೃಹತ್ ಸಮಾವೇಶ ಮಾಡಿ ಅವಳಿ ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕನಿಷ್ಠ 8 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದು ಬಿಜೆಪಿ ಉದ್ದೇಶವಾಗಿದೆ. ಕೋಲಾರ 6, ಚಿಕ್ಕಬಳ್ಳಾಪುರ 5, ಬೆಂಗಳೂರು ಗ್ರಾಮಾಂತರ 4 ಸೇರಿ ಒಟ್ಟು 15 ಕ್ಷೇತ್ರಗಳನ್ನ ಗುರಿಯಾಗಿಸಿಕೊಂಡು ಬೃಹತ್ ಸಮಾವೇಶ ನಡೆಯುತ್ತಿದೆ. ಇದರ ಜೊತೆಗೆ ಜೆಡಿಎಸ್ ಹಾಗೂ ಕಾಂಗ್ರೆಸ್ ಭದ್ರಕೋಟೆ ಛಿದ್ರ ಮಾಡಲು ಬಿಜೆಪಿ ರಣತಂತ್ರ ರೂಪಿಸಿದೆ.
ಇದನ್ನೂ ಓದಿ :ರಾಹುಲ್ ಗಾಂಧಿ ಹೋದಲ್ಲೆಲ್ಲ ಕಮಲ ಅರಳಿದೆ: ಸಿಎಂ ಬೊಮ್ಮಾಯಿ ಲೇವಡಿ