ಕೋಲಾರ:ಹೆರಿಗೆಗೆಂದು ಬಂದಿದ್ದ ಗರ್ಭಿಣಿ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದ್ದು, ಮೃತಳ ಸಂಬಂಧಿಕರು ಆರ್ ಎಲ್ ಜಾಲಪ್ಪ ಆಸ್ಪತ್ರೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಾಲಪ್ಪ ಆಸ್ಪತ್ರೆಯಲ್ಲಿ ಗರ್ಭಿಣಿ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ,ಪ್ರತಿಭಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ನಿಡಗುರ್ಕಿ ಗ್ರಾಮದ ಅನುಷಾ (24) ಮೃತ ಗರ್ಭಿಣಿ. ಕೋಲಾರದ ಹೊರವಲಯದ ಟಮಕ ಬಳಿ ಇರುವ ಆರ್.ಎಲ್. ಜಾಲಪ್ಪ ಆಸ್ಪತ್ರೆಯಲ್ಲಿ ಗರ್ಭಿಣಿ ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾಳೆಂದು ಮೃತಳ ಸಂಬಂಧಿಕರು ಆರೋಪಿಸಿದ್ದಾರೆ.
ಅನುಷಾ ಅವರನ್ನು ಹೆರಿಗೆಗೆಂದು ಶುಕ್ರವಾರ ಸಂಜೆ ಜಾಲಪ್ಪ ಆಸ್ಪತ್ರೆಗೆ ದಾಖಲಿಸಿದ್ದರು. ಆದ್ರೆ ಇಂದು ಮುಂಜಾನೆ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ಗರ್ಭಿಣಿ ಸಾವನ್ನಪ್ಪಿದ್ದಾರೆ. ಅನುಷಾ ಎದೆ ನೋವು ಹಾಗೂ ಉಸಿರಾಟದ ತೊಂದರೆಯಿಂದ ಮೃತಪಟ್ಟಿರುವುದಾಗಿ ವೈದ್ಯರು ಸಂಬಂಧಿಕರಿಗೆ ತಿಳಿಸಿದ್ದಾರೆ ಎನ್ನಲಾಗ್ತಿದೆ.
ಆದ್ರೆ ಸರಿಯಾಗಿ ಚಿಕಿತ್ಸೆ ನೀಡದೆ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ ಸಾವನ್ನಪ್ಪಿದ್ದಾಳೆ ಎಂದು ಆರೋಪಿಸಿದ ಸಂಬಂಧಿಕರು, ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು. ಘಟನೆಗೆ ಕಾರಣರಾದ ಆಸ್ಪತ್ರೆ ವೈದ್ಯರ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ನ್ಯಾಯಕ್ಕಾಗಿ ಆಗ್ರಹಿಸಿದರು. ಎಎಸ್ಪಿ ಜಾಹ್ನವಿ ಸ್ಥಳಕ್ಕೆ ಭೇಟಿ ನೀಡಿದ್ದು, ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಓದಿ:ಕಾರ್ಖಾನೆಯಲ್ಲಿ ಎಲ್‌ಪಿಜಿ ಸಿಲಿಂಡರ್ ಸ್ಫೋಟ: ಓರ್ವ ಸಾವು