ಕೋಲಾರ : ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಯರಗೋಳು ಗ್ರಾಮದ ಬಳಿ ವ್ಯರ್ಥವಾಗಿ ತಮಿಳುನಾಡಿಗೆ ಹರಿದು ಹೋಗುತ್ತಿದ್ದ ನೀರಿಗೆ ಅಡ್ಡಲಾಗಿ ಡ್ಯಾಂ ನಿರ್ಮಾಣ ಮಾಡಿ ಕೋಲಾರ, ಬಂಗಾರಪೇಟೆ, ಮಾಲೂರು ಪಟ್ಟಣ ಹಾಗೂ 45 ಗ್ರಾಮಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆ ಇದಾಗಿದೆ. ಯರಗೋಳ್ ಯೋಜನೆ ಆರಂಭವಾಗಿ 17 ವರ್ಷ ಕಳೆದರೂ ಇನ್ನೂ ಪೂರ್ಣವಾಗಿರಲಿಲ್ಲ. ಬಹುತೇಕ ಅರ್ಧ ಟಿಎಂಸಿಯಷ್ಟು ನೀರು ಶೇಖರಣೆ ಸಾಮರ್ಥ್ಯ ಹೊಂದಿರುವ ಯರಗೋಳ್ ಡ್ಯಾಂ ಸತತ 17 ವರ್ಷಗಳ ನಂತರ ಯೋಜನೆ ಪೂರ್ಣವಾಗಿದೆ. ಈ ಯೋಜನೆಯನ್ನ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಲಿದ್ದಾರೆ.
ಇನ್ನು ಬಂಗಾರಪೇಟೆ ನೀರು ಶುದ್ಧೀಕರಣ ಘಟಕ ಉದ್ಘಾಟನೆಯನ್ನು ನಗರಾಭಿವೃದ್ಧಿ ಮತ್ತು ಪಟ್ಟಣ ಯೋಜನೆ ಸಚಿವ ಬಿ ಎಸ್ ಸುರೇಶ್ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ ಎಚ್ ಮುನಿಯಪ್ಪ, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಇಂಧನ ಸಚಿವ ಕೆ.ಜೆ ಜಾರ್ಜ್, ಸಮಾಜ ಕಲ್ಯಾಣ ಸಚಿವ ಡಾ. ಹೆಚ್. ಸಿ ಮಹದೇವಪ್ಪ, ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ, ಗ್ರಾಮೀಣ ಅಭಿವೃದ್ಧಿ ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ ಸೇರಿದಂತೆ ಜಿಲ್ಲೆಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಎಸ್. ಮುನಿಸ್ವಾಮಿ, ಸೇರಿದಂತೆ ಎಲ್ಲಾ ಶಾಸಕರು ಭಾಗವಹಿಸಲಿದ್ದಾರೆ.
ನಾಳೆ ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯರಗೋಳ್ ಯೋಜನೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಈಗಾಗಲೇ ಜಿಲ್ಲಾಡಳಿತದ ವತಿಯಿಂದ ಬೃಹತ್ ಕಾರ್ಯಕ್ರಮಕ್ಕೆ ಸಿದ್ದತೆಗಳು ಭರದಿಂದ ಸಾಗುತ್ತಿದೆ. ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಸುಮಾರು 25 ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಹೊಂದಲಾಗಿದೆ. ಇನ್ನು ಮುಖ್ಯಮಂತ್ರಿಗಳು ಬರುವ ಹಿನ್ನಲೆಯಲ್ಲಿ ಬಲಮಂದೆ ವ್ಯಾಪ್ತಿಯಲ್ಲಿ ಹಳ್ಳಕೊಳ್ಳಗಳಿಂದ ಕೂಡಿದ್ದ ರಸ್ತೆಗಳಿಗೆ ಡಾಂಬರೀಕರಣದ ಭಾಗ್ಯ ಲಭಿಸಿದೆ.