ಕೊಪ್ಪಳ: ಪೆಟ್ರೋಲ್, ಡೀಸೆಲ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲೆಯ ಯಲಬುರ್ಗಾ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಪೆಟ್ರೊಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವರಾಜ ತಂಗಡಗಿ, ಮಾಜಿ ಸಚಿವ ಬಸವರಾಜ ರಾಯರೆಡ್ಡಿ ನೇತೃತ್ವದಲ್ಲಿ ಯಲಬುರ್ಗಾ ಪಟ್ಟಣದ ಮೊಗ್ಗಿ ಬಸವೇಶ್ವರ ದೇವಸ್ಥಾನದ ಬಳಿಯಿಂದ ತಹಶೀಲ್ದಾರ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವರಾಜ ತಂಗಡಗಿ, ಕೇಂದ್ರ ಸರ್ಕಾರ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಜಾರಿ ಮಾಡಿ ರೈತರನ್ನು ಮೂಲೆಗುಂಪು ಮಾಡಲು ಹೊರಟಿದೆ. ಬಿಜೆಪಿ ಸರ್ಕಾರ ಬಂಡವಾಳಶಾಹಿಗಳ ಪರವಾಗಿದ್ದು, ರೈತರಿಗೆ, ಕೂಲಿ ಕಾರ್ಮಿಕರಿಗೆ ಹಾಗೂ ಬಡವರಿಗೆ ಮರಣ ಶಾಸನ ಬರೆಯಲು ಹೊರಟಿದೆ. ಪೆಟ್ರೋಲ್, ಡೀಸೆಲ್ ಹಾಗೂ ಅಗತ್ಯ ವಸ್ತುಗಳ ವಸ್ತುಗಳ ಬೆಲೆ ಏರಿಕೆಯಾಗಿವೆ. ಇದರಿಂದ ಸಾಮಾನ್ಯ ಜನರ ಜೀವನದ ಮೇಲೆ ಬರೆ ಎಳೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೆಲೆ ಏರಿಕೆಯನ್ನು ನಿಯಂತ್ರಣ ಮಾಡುವುದರ ಜೊತೆಗೆ ರೈತ ವಿರೋಧಿ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು. ಬಳಿಕ ತಹಶೀಲ್ದಾರರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.