ಗಂಗಾವತಿ (ಕೊಪ್ಪಳ): ಜಿಲ್ಲೆಯಲ್ಲಿ ನಡೆದ ಕಲುಷಿತ ನೀರು ಸೇವನೆ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಮೇಲಾಧಿಕಾರಿಗಳಿಗೆ ಶಿಫಾರಸು ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಜಿಲ್ಲೆಯಲ್ಲಿ ಕುಡಿಯುವ ನೀರಿನ ಗುಣಮಟ್ಟ, ಪರಿಶುದ್ಧತೆ ಪರಿಶೀಲನೆ ನಡೆಯುತ್ತಿದೆ. ಕುಡಿಯುವ ನೀರಿನಿಂದಾದ ಪ್ರಕರಣಗಳು ನಿಯಂತ್ರಣದಲ್ಲಿವೆ. ಇದರ ಕುರಿತಾಗಿ ಸಿಎಂ ಅವರ ಗಮನಕ್ಕೆ ತರಲಾಗಿದೆ. ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ಕಲ್ಪಿಸಿಕೊಡುವ ವ್ಯವಸ್ಥೆ ಮಾಡಲಾಗಿದೆ. ಮುಂದಿನ ಏಳೆಂಟು ದಿನಗಳಲ್ಲಿ ಪರಿಹಾರವನ್ನು ಮೃತರ ಕುಟುಂಬಕ್ಕೆ ತಲುಪಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.
ವಿಧಾನಸಭಾ ಕ್ಷೇತ್ರಕ್ಕೆ ಒಬ್ಬ ನೋಡಲ್ ಅಧಿಕಾರಿ:ಕುಡಿಯುವ ನೀರು ಸೇರಿದಂತೆ ಜನರ ಸಮಸ್ಯೆ ಅರಿಯಲು ಮತ್ತು ಅವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಬ್ಬೊಬ್ಬ ನೋಡಲ್ ಅಧಿಕಾರಿಯನ್ನು ನಿಯೋಜಿಸಲಾಗುತ್ತಿದೆ. ಈಗಾಗಲೇ ಜಿಲ್ಲಾ ಹಂತದ ಅಧಿಕಾರಿಗಳ ಸಭೆ ನಡೆಸಲಾಗಿದೆ. ಪ್ರತಿಯೊಂದು ವಿಧಾನಸಭಾ ಕ್ಷೇತ್ರಕ್ಕೆ ಜಿಲ್ಲಾ ಹಂತದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗುತ್ತಿದೆ. ಈ ನೋಡಲ್ ಅಧಿಕಾರಿಗಳು ಮುಂದಿನ ಕೆಡಿಪಿ ಸಭೆಯೊಳಗೆ ಎಲ್ಲ ಅಧಿಕಾರಿಗಳನ್ನೊಳಗೊಂಡಂತೆ ಕುಡಿಯುವ ನೀರಿನ ವಿಷಯಕ್ಕೆ ಸಂಬಂಧಿಸಿದಂತೆ ಸಭೆ ನಡೆಸಬೇಕು. ಕೇವಲ ನೀರು ಮಾತ್ರವಲ್ಲ ಜನರ ನಾನಾ ಸಮಸ್ಯೆ ಇರಬಹುದು. ಅಲ್ಲಿ ಚರ್ಚೆ ಯಾಗಿ ನೀಡುವಂತೆ ಸೂಚನೆ ನೀಡಲಾಗಿದೆ.
ಕೇವಲ ಕ್ಷೇತ್ರಕ್ಕೆ ಮಾತ್ರವಲ್ಲ ನೋಡಲ್ ಅಧಿಕಾರಿಗಳನ್ನು ಪಟ್ಟಣ ಪಂಚಾಯಿತಿ, ಪುರಸಭೆ ಮತ್ತು ನಗರಸಭೆಗಳಿಗೂ ಜಿಲ್ಲಾ ಹಂತದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನಿಯೋಜಿಸಲಾಗುವುದು. ಅಧಿಕಾರಿಗಳು ಸಭೆಗಳನ್ನು ಮಾಡಬೇಕು, ಯಾವ ಅಭಿವೃದ್ಧಿ ಕೆಲಸಗಳು ಸ್ಥಗಿತವಾಗಿರುವ ಕುರಿತಾಗಿ ವರದಿ ನೀಡಬೇಕು. ಈ ಮೂಲಕ ಸಮಸ್ಯೆ ಇತ್ಯರ್ಥಕ್ಕೆ ಯತ್ನಿಸಲಾಗುವುದು ಎಂದು ತಂಗಡಗಿ ಹೇಳಿದರು.