ಕೊಪ್ಪಳ:ರಸ್ತೆಬದಿ ನಿಂತಿದ್ದ ಕ್ಯಾಂಟರ್ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದು, ಓರ್ವ ಆಸ್ಪತ್ರೆಗೆ ಸಾಗಿಸುವಾಗ ಅಸುನೀಗಿದ ಘಟನೆ ಜು.13 ರಂದು ಕೊಪ್ಪಳ ಜಿಲ್ಲೆ ವಣಗೇರಿ ಕ್ರಾಸ್ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಜರುಗಿದೆ. ವಿಜಯಪುರ ಮೂಲದ, ಕಲ್ಲೂರಿನ ಭೋಜಪ್ಪ ಚವ್ಹಾಣ (27), ಬಿದರಕುಂದಿಯ ಗೌರಮ್ಮ ಕನ್ನೂರ(43), ಸುರೇಶ ಹಂಡರಗಲ್( 60) ಮೃತ ದುರ್ದೈವಿಗಳು. ನಿದ್ದೆಗಣ್ಣಿನಲ್ಲಿ ವಾಹನ ಚಲಾಯಿಸಿದ ಹಿನ್ನೆಲೆ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕುಷ್ಟಗಿ ಠಾಣಾ ಪೊಲೀಸರು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೊಪ್ಪಳ ತಾಲೂಕಿನ ಮಂಗಳಪುರ ರಾಷ್ಟ್ರೀಯ ಹೆದ್ದಾರಿ ಬಳಿ ನಿಂತಿದ್ದ ಲಾರಿಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ತಾಯಿ ಹಾಗೂ ಮಗ ಮೃತಪಟ್ಟಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಮೃತರನ್ನು ಗದಗ ಜಿಲ್ಲೆಯ ರೋಣ ತಾಲೂಕಿನ ಗಜೇಂದ್ರಗಡದ ಪುಟ್ಟರಾಜು ವಸ್ತ್ರದ(46) ಹಾಗೂ ಗಂಗಮ್ಮ ವಸ್ತ್ರದ(70) ಎಂದು ಗುರುತಿಸಲಾಗಿದೆ. ಮೃತರು ಗಜೇಂದ್ರಗಡದಿಂದ ಕೊಪ್ಪಳ ಮಾರ್ಗವಾಗಿ ಹೊಸಪೇಟೆಗೆ ಬೈಕ್ನಲ್ಲಿ ತೆರಳುತ್ತಿದ್ದರು. ತಾಲೂಕಿನ ಮಂಗಳಾಪುರ ಬಳಿ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆಯ ಪಕ್ಕದಲ್ಲಿ ನಿಂತಿದ್ದ ಲಾರಿಗೆ ದ್ವಿಚಕ್ರ ವಾಹನವು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಇಬ್ಬರ ತಲೆಗೂ ಗಂಭೀರ ಪೆಟ್ಟಾಗಿ ರಕ್ತಸ್ರಾವದಿಂದ ಬಳಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬಂದ ಕೊಪ್ಪಳ ಗ್ರಾಮೀಣ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಕೆಎಸ್ಆರ್ಟಿಸಿ ಬಸ್ ಮತ್ತು ಕಾರಿನ ನಡುವೆ ಅಪಘಾತ:ಮೈಸೂರು - ಹುಣಸೂರು ಹೆದ್ದಾರಿಯ ಬನ್ನಿಕುಪ್ಪೆ ಬಳಿ ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಬ್ಬ ಮೃತಪಟ್ಟಿದ್ದರೆ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಿನ್ನೆ ನಡೆದಿದೆ. ಗಾಯಾಳುಗಳನ್ನು ಮೈಸೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗ್ರಾ.ಪಂ ಸದಸ್ಯ ಲೇ. ಚಿಕ್ಕೇಗೌಡರ ಪುತ್ರ ಭಾಸ್ಕರ್(42) ಮೃತರು ಎಂದು ಗುರತಿಸಲಾಗಿದೆ. ಇವರ ಪತ್ನಿ ರಮ್ಯ, ತಾಯಿ ಸಾವಿತ್ರಮ್ಮ, ಪುತ್ರ ಚರಿತ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಬಳಿಕ ಸ್ಥಳೀಯ ಗ್ರಾಮಸ್ಥರು ಧಾವಿಸಿ ಗಾಯಾಳುಗಳನ್ನು ರಕ್ಷಣೆ ಮಾಡಿದ್ದು, ಸದ್ಯ ಮೈಸೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.